ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿಂದ ಸಾಲ: ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ: ಸಿಎಂ ಭರವಸೆ

ಬೆಂಗಳೂರು: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಒನ್ ಟೈಮ್ ಸೆಟಲ್ ಮೆಂಟ್ (ಓ.ಟಿ.ಎಸ್) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದರು

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್‌ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಭೇಟಿಯಾದ ರೈತ ಮುಖಂಡರ ನಿಯೋಗದೊಂದಿಗೆ ಈ ಕುರಿತು ಚರ್ಚಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದ ರೈತರು, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತ ದಂತಹ ಸಮಸ್ಯೆಗಳಿಂದಾಗಿ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಬ್ಯಾಂಕಿನ ಸಿಬ್ಬಂದಿ ಸಾಲ ಮರುಪಾವತಿಗೆ ಲೀಗಲ್‌ ನೋಟೀಸುಗಳನ್ನು ಕಳುಹಿಸಿ, ಅದರ ವೆಚ್ಚವನ್ನೂ ರೈತರ ಮೇಲೆಯೇ ಹಾಕುತ್ತಿದ್ದಾರೆ.

ಇಂತಹ ಕ್ರಮಗಳಿಂದಾಗಿ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 3೦ ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಖಂಡಿಸಿ 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ.

ರೈತರು ಓ.ಟಿ.ಎಸ್. ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ಮುಖಂಡರು ಮನವಿ ಮಾಡಿದರು.

ಬ್ಯಾಂಕಿನ ಆಡಳಿತ ಮಂಡಳಿ ಇದಕ್ಕೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕಿನಲ್ಲಿ 6500 ಕೋಟಿ ರೂ. ಸುಸ್ತಿ ಸಾಲವಿದ್ದು, ಅದರಲ್ಲಿ 5000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದು ಬ್ಯಾಂಕಿನ ಅಧಿಕಾರಿಗಳು ತಿಳಿಸಿದರು.

ಈ ವೇಳೆ ಬ್ಯಾಂಕಿನ ಅಧ್ಯಕ್ಷರು ಗೈರು ಹಾಜರಾಗಿದ್ದುದಕ್ಕೆ ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ‌ಸಿದ್ದರಾಮಯ್ಯ ಅವರು ಮಾತನಾಡಿ ರೈತರ ಜತೆ ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕರುಗಳ ಸಭೆ ನಡೆಸಿದ ಪರಿಹಾರ ಸೂತ್ರ ಕಂಡುಕೊಂಡ ನಂತರ ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ಭರವಸೆ ನೀಡಿದರು.

ಕೃಷಿ ತಜ್ಞ ಡಾ. ಪ್ರಕಾಶ್‌ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿದಂತೆ ಹಲವು ರೈತ ಮುಖಂಡರು ಹಾಜರಿದ್ದರು.