ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಇದೆ, ಹಾಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಪಕ್ಷ ಕೈ ಹಾಕಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲದಿದ್ದರೆ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಆಗಲಿದೆ ಎಂಬುದನ್ನು ಅರಿತೇ ಆಪರೇಷನ್ ಹಸ್ತ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮಳೆ ಬಾರದೆ, ಬೆಳೆಗಳಿಗೆ ನೀರಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮಕೈಗೊಂಡಿಲ್ಲ. ಕುಡಿಯುವ ನೀರು, ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ನೀರಿನ ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆ ಆಗಿದೆ. ಇದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿ ರೈತರಿಗೆ ಸಮಸ್ಯೆಯಾಗಲಿದೆ. ಯಾವುದೇ ಕ್ರಮಕ್ಕೆ ಮುಂದಾಗದೆ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು.
ವರ್ಗಾವಣೆ ದಂದೆ ಸೇರಿದಂತೆ ಹಲವು ವಿಚಾರದಲ್ಲಿ ತಮ್ಮ ಸ್ವಹಿತಾಸಕ್ತಿಗಾಗಿ ಕಾಂಗ್ರೆಸ್ನವರು ಬಡಿದಾಡುತ್ತಿದ್ದಾರೆ. ಇದು ವಿಪರ್ಯಾಸ ಎಂದರು.

