ಬೆಂಗಳೂರು: ಕರ್ತವ್ಯದ ಮೇಲಿದ್ದಾಗ
ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಸಿಎಂ ಮಾತನಾಡಿದರು.
ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ ಎಂದು ತಿಳಿಸಿದರು.
ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ.
ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.
ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎಂದು ಆದೇಶಿಸಿದರು.
ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಜಿಡಿಪಿಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.
ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ ಎಂದು ಹೇಳಿದರು.
2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು ಎಂದು ಸಿಎಂ ತಿಳಿಸಿದರು.
ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.

