ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊರಡುವ ರಾಜ್ಯದ ಅಂತರಾಜ್ಯ ಬಸ್‌ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಾಚರಣೆಯಲ್ಲಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸಿಗೆ ಬೆಂಕಿ ಹಚ್ಚಿದ್ದು ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು  ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ.

ಸೋಮವಾರ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಗೆ (ಸಂಖ್ಯೆ ಕೆ.ಎ-38 ಎಫ್-1201 ) ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ.

ಹೆಚ್ಚು ‌ಅನಾಹುತವಾಗಬಾರದೆಂಬ ಕಾರಣಕ್ಕೆ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರಾಜ್ಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರ ನೆರವಿನಿಂದ ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಕಾರ್ಯಾಚರಣೆಯಲ್ಲಿರುವ ಬಸ್ ಗಳನ್ನು ಹತ್ತಿರದ ಪೊಲೀಸ್ ಠಾಣೆ, ಬಸ್ ಡಿಪೋ ಗಳಲ್ಲಿ ನಿಲುಗಡೆ ಮಾಡುವಂತೆ ಸಂಸ್ಥೆ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ರಾಚಪ್ಪ ಹೇಳಿದರು.

ಮರಾಠ ಮೀಸಲಾತಿಗೆ ಒತ್ತಾಯಿಸಿ ಕಳೆದ ಆಗಸ್ಟ್​ ತಿಂಗಳಿನಿಂದ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅಕ್ಟೋಬರ್​ 25ರಂದು ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಅನಿರ್ದಿಷ್ಟವಾಧಿ ಉಪವಾಸ ಸತ್ಯಾಗ್ರಹ ಆರಂಭಗೊಂಡಿತ್ತು.ಇದರಿಂದಾಗಿ ಮತ್ತೆ ರಾಜ್ಯಾದ್ಯಂತ ಮರಾಠ ಮೀಸಲಾತಿ ಹೋರಾಟ ತೀವ್ರಗೊಂಡಿದೆ. ಇದೀಗ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಶಾಸಕರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್​ಗೆ ಪ್ರತಿಭಟನಾಕಾರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.