ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೊಪ್ಪಳದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ ಮನವಿ ಸಲ್ಲಿಸಿದೆ. ರಾಜ್ಯದ ಸಚಿವರ ಭೇಟಿಗೂ ಸಮಯ ನೀಡದೇ , ಪರಿಹಾರ ಮೊತ್ತವನ್ನು ಬಿಡುಗಡೆ ಮಾಡದೇ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೇಂದ್ರಸರ್ಕಾರ ನರೇಗಾ ಯೋಜನೆಯಡಿ ದಿನಗೂಲಿ ಕಾರ್ಮಿಕರ ವೇತನ 600 ಕೋಟಿ ರೂ.ಗಳನ್ನೂ ಬಿಡುಗಡೆ ಮಾಡಿಲ್ಲ ಎಂದು ಅಸಮಾಧಾನ ಪಟ್ಟರು.
ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆಗೆ ಚರ್ಚೆ :
ಕೇಂದ್ರ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೆವಾಲ ಹಾಗೂ ವೇಣುಗೋಪಾಲ್ ಅವರು ರಾಜ್ಯಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ ಎಂದು ತಿಳಿಸಿದರು.
ಶಾಸಕರನ್ನು ಕೆಲವು ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆಯೂ ಇದ್ದು,ಈ ಕುರಿತು ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದರು.
ಬರನಿರ್ವಹಣೆಗೆ ಸಂಬಂಧಿಸಿದಂತೆ ಯಾವ ಸಚಿವರೂ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲಾ ಜಿಲ್ಲಾ ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಿ, ಜನರ ಅಹವಾಲುಗಳನ್ನು ಆಲಿಸಿ ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ರಾಜ್ಯಸರ್ಕಾರ ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಅನುದಾನ ನೀಡಲಾಗಿದೆ ಎಂದು ಹೇಳಿದರು.
ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳು ರೈತರಿಗೆ ನಿಲ್ಲಿಸಲಾಗಿದೆ ಎಂಬ ಆರೋಪ ಇದೆಯಲ್ಲ ಎಂಬ ಪ್ರಶ್ನೆಗೆ,ಈ ವಿಚಾರ ಕೃಷಿ ಇಲಾಖೆಗೆ ಸಂಬಂಧಪಟ್ಟಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಈ ಮುಂಚೆ ನೀಡುತ್ತಿದ್ದಂತೆ ಕೃಷಿ ಪಂಪಸೆಟ್ ಗಳಿಗೆ ಪೂರಕ ಸೌಲಭ್ಯಗಳನ್ನು ರೈತರಿಗೆ ಮುಂದುವರೆಸಲಾಗುವುದು ಎಂದು ತಿಳಿಸಿದರು.
ಬಿಜೆಪಿಯವರ ಹಗಲು ಕನಸು :
ತನಿಖಾ ಸಂಸ್ಥೆಗಳಿಂದ ಕಾಂಗ್ರೆಸ್ ನವರ ಭ್ರಷ್ಟಾಚಾರ ಬೆಳಕಿಗೆ ಬರುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿರುವ ಬಗ್ಗೆ ಉತ್ತರಿಸಿ, ಇವೆಲ್ಲ ಸುಳ್ಳು ಆರೋಪಗಳು ಎಂದು ಹೇಳಿದರು.
ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ ಎಂಬ ಪ್ರಶ್ನೆಗೆ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಟಾಂಗ್ ನೀಡಿದರು ಸಿದ್ದರಾಮಯ್ಯ.
ರಮೇಶ್ ಜಾರಕಿಹೊಳಿ ಕುರಿತಂತೆ ಕೇಳಿದ ಪ್ರಶ್ನೆಗೆ, ಅವರು ಸೋತು ಮನೆಯಲ್ಲಿರುವವರು, ಬಾಯಿಗೆ ಬಂದಂತೆ ಮಾತನಾಡುತ್ತಾರೆ, ಅದಕ್ಕೆಲ್ಲಾ ಉತ್ತರಿಸಲಾಗುವುದಿಲ್ಲ ಎಂದು ಹೇಳಿದರು.

