ಹೊಸಪೇಟೆ: ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ,ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಹೊಸಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಯಾವುದೇ ವರ್ಗದ ಗಣಿಗಾರಿಕೆ ಕಾನೂನುಬದ್ಧವಾಗಿ ಪರವನಾಗಿ ತೆಗೆದುಕೊಂಡಲ್ಲಿ, ಎಲ್ಲ ಸಂಬಂಧಪಟ್ಟ ಇಲಾಖೆಗಳಿಂದ ಸಂಪೂರ್ಣ ಸಹಕಾರ ದೊರೆಯಲಿದೆ ಎಂದು ಹೇಳಿದರು.
ಅರಣ್ಯ ಇಲಾಖೆಯೊಂದಿಗೆ ಈ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದ್ದು, ಎ,ಬಿ, ಸಿ ಅಥವಾ ಯಾವುದೇ ವರ್ಗದ ಗಣಿಗಾರಿಕೆಗೆ ತೊಂದರೆ ನೀಡದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ.
ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಪರ್ಯಾಯ ಕ್ರಮಗಳ ಬಗ್ಗೆಯೂ ತಿಳಿಸಲಾಗಿದೆ. ನಾವು ಹಿಂದೆ ಅಕ್ರಮ ಗಣಿಗಾರಿಕೆ ಬಗ್ಗೆ ಹೋರಾಟ ನಡೆಸಿದ್ದೆವು. ಅಕ್ರಮ ಗಣಿಗಾರಿಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

