ಅಕ್ರಮ ವಿದ್ಯುತ್ : ದಂಡ ಕಟ್ಟುತ್ತೇನೆ ಎಂದ ಮಾಜಿ ಸಿಎಂ

ಬೆಂಗಳೂರು: ದೀಪಾವಳಿ ಪ್ರಯುಕ್ತ ಮನೆಯ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್‌ ಪಡೆದಿದ್ದಾರೆ ಎಂ‌ಬ ಆರೋಪಕ್ಕೆ ಮಾಜಿ ಮುಖ್ಯ ಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಬಹಳ‌ ಬೇಸರ‌ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿತ್ತು.ಅದಕ್ಕೆ ‌ಪ್ರತಿಕ್ರಿಯಿಸಿರುವ ಎಚ್ ಡಿ ಕೆ ವಿದ್ಯುತ್ ‌ಗೆ ದಂಡ ಕಟ್ಟುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಅವರು, ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ, ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ ಎಂದು ತಿಳಿಸಿದ್ದಾರೆ.

ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಗೆ ಹೇಳಿದ್ದೆವು ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ನಂತರ ಪರೀಕ್ಷಿಸಲು ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದಿದ್ದರು, ಆಗ ನಾನು ಬಿಡದಿಯ ತೋಟದಲ್ಲಿದ್ದೆ ಎಂದು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು, ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ,ಇದು ವಾಸ್ತವ ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ಕೊಡಲಿ ನಾನು ದಂಡ ಕಟ್ಟುತ್ತೇನೆ ಎಂದು ಹೇಳಿದ್ದಾರೆ.

ಇದನ್ನೇ ರಾಜ್ಯ ಕಾಂಗ್ರೆಸ್‌ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದು ಬೇಸರದಲ್ಲೇ ಬರೆದಿದ್ದಾರೆ.

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ, ಕಂಡವರ ಭೂಮಿಗೆ ಬೇಲಿ ಹಾಕಿಲ್ಲ, ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ.

ಆದರೆ,ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೂ ನಾನು ಸಿದ್ಧ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.