ಬೆಂಗಳೂರು : ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್, ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದರು.
ಹಿಂದೆ ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ದುಪ್ಪಟ್ಟು ಪರಿಹಾರ ನೀಡಿದ್ದೆವು. ನಂತರ ಕೇಂದ್ರದ ನೆರವು ಖಜಾನೆಗೆ ಬಂತು. ಆ ಕೆಲಸ ಮಾಡಲು ಇವರಿಗೇನು ಕಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಟಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಕೇಳಿದರೆ ಎಲ್ಲದಕ್ಕೂ ಲಂಚ ಕೊಡಬೇಕು ಎಂಬುದಾಗಿ ರೈತರು ದೂರು ನೀಡುತ್ತಿದ್ದಾರೆ ಎಂದು ಅಶೋಕ್ ಹೇಳಿದರು.
ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎನ್ನುತ್ತಾರೆ, ಅದು ನಿಜವೇ ಆಗಿದ್ದಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಿ ಬೆಳಗಾವಿ ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಯವರ ಜನತಾದರ್ಶನ ಕಾರ್ಯವನ್ನು ಬೋಗಸ್ ದರ್ಶನ ಎಂದು ಟೀಕಿಸಿದರು.
ಸಿಎಂ ಸೇರಿದಂತೆ ಎಲ್ಲ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಜನತಾದರ್ಶನ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡಿದಿದ್ದರೆ ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಅದನ್ನು ಬಿಟ್ಟು ಸಿಎಂ ಅವರು ಸೀಮಿತ ಸಂಖ್ಯೆಯ ಜನರ ಅಹವಾಲು ಕೇಳಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ದಿಢೀರ್ ಎಂದು ಸಿಎಂ ಅವರು ಜನತಾದರ್ಶನ ಮಾಡುತ್ತಿದ್ದಾರೆ ಎಂದರೆ ಇವತ್ತು ದೀರ್ಘ ಕಾಲದ ನಿದ್ದೆಯಿಂದ ಎದ್ದಿದ್ದಾರೆ ಎಂದು ಅರ್ಥ ವ್ಯಂಗ್ಯವಾಡಿದರು.
ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಶೋಕ್, ಈಗಾಗಲೇ ಮೂರು ಪಕ್ಷಗಳಿಗೆ ಪಕ್ಷಾಂತರ ಮಾಡಿದ್ದಾರೆ ಅವರು. ಹೀಗಾಗಿ ಪಕ್ಷಗಳ ಸಂಸ್ಥಾಪಕ ಅಧ್ಯಕ್ಷರು ಯಾರು ಎಂಬುದನ್ನೇ ತಿಳಿದುಕೊಂಡಿಲ್ಲ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಸ್ಥಾಪಕ ಅಧ್ಯಕ್ಷ ಬ್ರಿಟಿಷ್ ಎಂಬುದೂ ಗೊತ್ತಿಲ್ಲ. ಬ್ರಿಟಿಷ್ ಪರಂಪರೆಯೇ ಕಾಂಗ್ರೆಸ್ ನಲ್ಲಿ ಮುಂದುವರೆಯುತ್ತಿದೆ ಎಂದು ಕುಟುಕಿದರು.

