ಬೆಂಗಳೂರು: ಬೆಂಗಳೂರಿನ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬಸವೇಶ್ವರ ನಗರದ ನ್ಯಾಷನಲ್ ಸ್ಕೂಲ್, ವಿದ್ಯಾಶಿಲ್ಪ, ಎನ್ಪಿಎಸ್, ಕಾರ್ಮೆಲ್, ಹೆಬ್ಬಗೋಡಿಯ ಎಬಿನೈಜರ್ ಸೇರಿದಂತೆ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಈ ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ ಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ತಿಳಿಸಿದರು.
ಶಾಲೆಗಳ ಬಳಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದ್ದಾರೆ. ಬಾಂಬ್ ಬೆದರಿಕೆ ಸಂದೇಶ ಬಂದಿದ್ದು,ಈ ಬಗ್ಗೆ ತನಿಖೆ ನಡೆಸುವಂತೆ ತಿಳಿಸಿದ್ದೇನೆ ಎಂದು ಸಿಎಂ ತಿಳಿಸಿದರು.

