ಬೆಂಗಳೂರು: ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಶಾಕ್ ನೀಡಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
13 ಅಧಿಕಾರಿಗಳ ಮನೆಗಳ ಮೇಲೆ ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಸ್ಕಾಂ ಜಾಗೃತ ದಳ ಅಧಿಕಾರಿ ಟಿ.ಎನ್ .ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಎಸ್.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೂ ದಾಳಿ ಮಾಡಲಾಗಿದೆ.
ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಲೋಕಯುಕ್ತ ದಾಳಿ ನಡೆದಿದೆ.
ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.
ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸಲಾಗುತ್ತಿದೆ.
ಬೆಳ್ಳಂಬೆಳಗ್ಗೆ ಮೈಸೂರಿನಲ್ಲೂ ಲೋಕಾಯುಕ್ತ ದಾಳಿ ನಡೆಸಿದ್ದು, ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ, ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದಾರೆ.
ಬೀದರ್ನಲ್ಲೂ ಸಹ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

