ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ವಿಚಾರಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪರಮೇಶ್ವರ್ ಮಾತನಾಡಿದರು.
24 ವರ್ಷದ ಯುವಕ ಯುವತಿಯನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾನೆ. ಹುಡುಗ-ಹುಡುಗಿ ಪ್ರೀತಿಸುತ್ತಿದ್ದರು ಎಂಬ ಮಾಹಿತಿ ಇದೆ,ಇದರಿಂದ ಯುವಕನ ತಾಯಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು.
ಸುಮಾರು 8 ರಿಂದ 10 ಜನ ಹಲ್ಲೆ ಮಾಡಿ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿದ್ದಾರೆ. ಪೊಲೀಸರಿಗೆ ವಿಷಯ ತಿಳಿದ ಬಳಿಕ ಆಸ್ಪತ್ರೆಗೆ ಕರೆದುಕೊಂಡು ದಾಖಲಿಸಿದ್ದಾರೆ.ಮಹಿಳೆಗೆ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದರು.
ಪೊಲೀಸರು ಈಗಾಗಲೇ 7 ಜನರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ಬಂಧಿಸಬೇಕಿದೆ ಎಂದು ಹೇಳಿದರು.
ಯುವಕ, ಯುವತಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಇಂತಹ ಘಟನೆಗಳು ಆಗಬಾರದು, ಪೊಲೀಸರಿಗೆ ದೂರು ನೀಡಿದ್ದರೆ ಅವರೇ ಕ್ರಮ ತೆಗೆದುಕೊಳ್ಳುತ್ತಿದ್ದರು.
ಊರಲ್ಲಿ ಹಿರಿಯರು ಮಾತನಾಡಿಕೊಂಡು ಬಗೆಹರಿಸಬಹದಿತ್ತು. ಆದರೆ ಇದೊಂದು ಅಮಾನವೀಯ ಘಟನೆ ಎಂದು ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದ ಬಳಿಕ ಪರಮೇಶ್ವರ್ ಮಹಿಳೆಯ ಮನೆಗೆ ಭೇಟಿ ನೀಡಿದರು.
ಈ ವೇಳೆ ಓಡಿ ಹೋಗಿರುವ ಹುಡುಗನ ಅಜ್ಜಿ
ಸಚಿವರ ಕಾಲಿಗೆ ಬಿದ್ದು,ಕಣ್ಣೀರು ಹಾಕಿ, ಮೈಮೇಲೆ ಇರುವ ಬಂಗಾರವನ್ನು ತೆಗೆದುಕೊಂಡು ಹೋಗಿದ್ದಾರೆ. ಬೆತ್ತಲೆ ಮಾಡಿ, ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು. ಈ ವೇಳೆ ಅಜ್ಜಿಯನ್ನು ಪರಮೇಶ್ವರ್ ಅವರು ಸಮಾಧಾನಪಡಿಸಲು ಯತ್ನಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್. ಎನ್ ಸಿದ್ದರಾಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.

