92 ವಿಪಕ್ಷ ಸಂಸದರ ಅಮಾನತು:ಖರ್ಗೆ‌ ನೇತೃತ್ವದಲ್ಲಿ ಪ್ರತಿಭಟನೆ

ನವದೆಹಲಿ: ಸಂಸತ್ತಿನ ಉಭಯ ಸದನಗಳ ಒಟ್ಟು 92 ವಿಪಕ್ಷ ಸಂಸದರನ್ನು ಪ್ರಸಕ್ತ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳ ಸದಸ್ಯರು ಮಂಗಳವಾರ ಸಂಸತ್ತಿನ ಒಳಗಡೆ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾಪ್ರಭುತ್ವ ಅಪಾಯದಲ್ಲಿದೆ, ನಾವು ಪಂಜರದಲಿಲ್ಲ ಎಂಬ ಭಿತ್ತಿಪತ್ರ ಹಿಡಿದು ಪ್ರತಿಭಟಿಸಿದ ಸದಸ್ಯರು, ಸಂಸತ್ ಭದ್ರತಾ ಲೋಪ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ, ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ, ಸಂಸತ್ತಿನಲ್ಲಿ ಅನೇಕ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಬಯಸುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.

ಸಂಸತ್ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಹೇಳಿಕೆ ನೀಡಬೇಕೆಂದು ಒತ್ತಾಯಿಸಿದರು.