ಬೆಂಗಳೂರು: ಕೊರೊನಾ ವೈರಸ್ನ ಜೆಎನ್ 1 ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ನಿವಾಸಿಗೆ ಕೊರೊನಾ ಜೊತೆ ಟಿಬಿ, ಬಿಪಿ ಸೇರಿದಂತೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ನಡುವೆ ಕೊರೊನಾ ಪಾಸಿಟಿವ್ ಕೂಡ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅದರಲ್ಲಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಿದ್ದಾರೆ. ಸಭೆಯ ನಂತರ ವಿಕಾಸ ಸೌಧದಲ್ಲಿ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮೃತ ವ್ಯಕ್ತಿಯ ಕುಟುಂಬದಲ್ಲಿ ಒಟ್ಟು 5 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ವೇಳೆ ಐವರಿಗೂ ನೆಗೆಟಿವ್ ಬಂದಿದೆ. ಸದ್ಯ ಐದು ಜನರು ಕೂಡ ಕ್ವಾರಂಟೈನ್ ನಲ್ಲಿ ಇದ್ದಾರೆ. ಮೃತಪಟ್ಟ ವ್ಯಕ್ತಿಯ ಜೆನೆಮಿಕ್ ಸೀಕ್ವೆನ್ಸ್ ರಿಪೋರ್ಟ್ ಗಾಗಿ ಬಿಬಿಎಂಪಿ ಕಾಯುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ದೇಶದಲ್ಲಿ ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. ಜೆಎನ್ .1 ವೈರಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ 20 ಜೆಎನ್.1 ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಸಚಿವರು ಹೇಳಿದರು.

