ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆ -ಸಿದ್ದರಾಮಯ್ಯ

ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್ಗಳು

ಬೆಂಗಳೂರು ಮಹಾನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣಿಸಿದ್ದು, ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲಾ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಉಚಿತ ಬಸ್ ಪ್ರಯಾಣವನ್ನು ಬಿಜೆಪಿ ಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಸಿದ್ದು ಪ್ರಶ್ನಿಸಿದರು.

ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಇಮ್ಮಡಿಯಾಗಿ, ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ ಎಂದು ಹೇಳಿದರು.

ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ.

ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದು ಯೋಜನೆಯ ಫಲಿತಾಂಶವನ್ನು ವಿವರಿಸಿದರು.

ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು ಎಂದು ಸಿದ್ದರಾಮಯ್ಯ ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ,

ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ಎಂ.ಸಿ.ಸುಧಾಕರ್, ನಾಗೇಂದ್ರ, ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಮತ್ತಿತರ ‌ಗಣ್ಯರು ಉಪಸ್ಥಿತರಿದ್ದರು

ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು