ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣ ಪ್ರತಿಷ್ಠೆ; ಹೆಚ್.ಡಿ.ಕೆ ಕುಟುಂಬಕ್ಕೆ ಆಹ್ವಾನ

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು,  ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನಿಸಿದೆ.

ಮಂಗಳವಾರ ಬೆಳಗ್ಗೆ ಬೆಂಗಳೂರಿನ ಹೆಚ್.ಡಿ.ಕೆ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೆಕೆಂದು ಕೋರಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ರಾಮ ಲಾಲ್ ಮತ್ತಿತರರು ಟ್ರಸ್ಟ್ ಪರವಾಗಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ  ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದರು.

ಆಹ್ವಾನ ಸ್ವೀಕರಿಸಿದ ಕುಮಾರಸ್ವಾಮಿ ಅವರು ಕುಟುಂಬ ಸಮೇತ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ರಾಮ್ ಲಾಲ್ ಅವರಿಗೆ ತಿಳಿಸಿದರು.

ರಾಮಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಆಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ಟ್ರಸ್ಟ್ ನ ಪ್ರಮುಖರು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ.