ಬೆಂಗಳೂರು: ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಯಿತು.
ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮೊದಲು ಸಿಎಂ ಮತ್ತು ಗಣ್ಯರು, ಒಬ್ಬ ಯುವತಿ ಹಾಗೂ ಯುವಕನನ್ನ ವೇದಿಕೆ ಮೇಲೆ ಕರೆಸಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಬಳಿಕ ಸಿಎಂ ಹಾಗೂ ಡಿಸಿಎಂ ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ ಮಾಡಿದರು.
ಇದೇ ವೇಳೆ ಸಿದ್ದರಾಮಯ್ಯ ಯುವನಿಧಿ ಯೋಜನೆಯ ಲೋಗೋ ಬಿಡುಗಡೆ ಮಾಡಿ ನಂತರ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೂ ಚಾಲನೆ ನೀಡಿದರು.
ಸಚಿವ ಶರಣು ಪ್ರಕಾಶ್ ಪಾಟೀಲ್ ಮಾತನಾಡಿ, ಚುನಾವಣೆ ಮುನ್ನ 5 ಗ್ಯಾರಂಟಿ ಯೋಜನೆ ಬಗ್ಗೆ ವಾಗ್ದಾನ ಮಾಡಲಾಗಿತ್ತು. ಭಾರತದ ಇತಿಹಾಸದಲ್ಲಿ ನಮ್ಮ ಸರ್ಕಾರ ಹೊಸ ಇತಿಹಾಸ ಸೃಷ್ಟಿ ಮಾಡಿದೆ ಎಂದು ಹೇಳಿದರು.
ಸಿಎಂ ಅವರು ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳಿಗೆ ಒಪ್ಪಿಗೆ ಕೊಟ್ಟರು. ಇದು ಐತಿಹಾಸಿಕ ನಿರ್ಣಯ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. 2023 ರಲ್ಲಿ ಜನ ನಂಬಿಕೆ ಇಟ್ಟು ಅಧಿಕಾರ ಕೊಟ್ಟಿದ್ದಾರೆ. ಜನರಿಗೆ ಕೊಟ್ಟ ಮಾತಿನಂತೆ 4 ಗ್ಯಾರಂಟಿ ಕಾರ್ಯಗತ ಮಾಡಿದ್ದೇವೆ. ಇಂದು 5ನೇ ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.
ನಮ್ಮ ಗ್ಯಾರಂಟಿ ಬಗ್ಗೆ ವಿಪಕ್ಷಗಳು ಟೀಕೆ ಮಾಡುತ್ತಿದೆ. ನಮ್ಮ ಸರ್ಕಾರ ಬಡವರ ಮನೆಗೆ ಬೊಕ್ಕಸದ ಬಹುಪಾಲು ಹಣ ಕೊಡುತ್ತಿದೆ.
ವಿಪಕ್ಷಗಳು ವಿಳಂಬ ಆಯ್ತು ಅಂತಾರೆ. ಆದರೆ ವಿಳಂಬವಾಗಿಲ್ಲ. ನಾವು ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ಜಾರಿ ಮಾಡ್ತಿದ್ದೇವೆ. ಯುವನಿಧಿ ದೇಶದಲ್ಲಿ ವಿಶೇಷ ಕಾರ್ಯಕ್ರಮವಾಗಿದೆ ಎಂದು ಸಚಿವರು ಹೇಳಿದರು.
ಯುವಕ-ಯುವತಿಯರ ನೆರವಿಗಾಗಿ ಸರ್ಕಾರ ಬಂದಿದೆ. 2022-23 ರಲ್ಲಿ ಉತ್ತೀರ್ಣರಾದವರು ಸೇವಾಸಿಂಧು, ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಉಚಿತವಾಗಿ ರಿಜಿಸ್ಟರ್ ಮಾಡಿಕೊಳ್ಳಬಹುದು ಎಂದು ಶರಣು ಪ್ರಕಾಶ್ ಪಾಟೀಲ್ ತಿಳಿಸಿದರು.
ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ಶಿವಮೊಗ್ಗದಲ್ಲಿ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತೇವೆ ಎಂದು ಸಚಿವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಸುಧಾಕರ್, ನಾಗೇಂದ್ರ, ಪ್ರಿಯಾಂಕ್ ಖರ್ಗೆ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

