ಬೆಂಗಳೂರು: ಕಳೆದ ನಾಲ್ಕೂವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಬಿಜೆಪಿಯವರಿಗೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ ಎಂದು ವ್ಯಂಗ್ಯ ವಾಡಿದ್ದಾರೆ.
ಅಪರಾಧಿಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು.
ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ.
ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ಶಕ್ತಿ ಹೀನವಾಗಿದೆ ಎಂದು ಸಿದ್ದು ಜರಿದಿದ್ದಾರೆ.
ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ.
ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿಗಿದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ ಎಂದು ಹೇಳಿದ್ದಾರೆ.

