ರಾಮನ ಪ್ರತಿಷ್ಠಾಪನೆ; ಜ.22ರಂದು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿರುವುದರಿಂದ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಲಿದೆ.

ರಾಮ ಮಂದಿರ ಮೂರ್ತಿ ಪ್ರತಿ‍ಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಜನವರಿ 22ರಂದು ಹಮ್ಮಿಕೊಳ್ಳಲು ಸೂಚಿಸಲಾಗಿದೆ.

ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಈಗಾಗಲೇ ಈ ಕುರಿತು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೂರ್ತಿ ಪ್ರತಿಷ್ಠಾಪನೆ ದಿನ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ರಾಜ್ಯದಲ್ಲಿರುವ ಶ್ರೀ ರಾಮನ ದೇವಾಲಯ ಮಾತ್ರವಲ್ಲ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆಯನ್ನು ನಡೆಸಲಾಗುತ್ತದೆ.

ಯಾವ ನಿಧಿಯಿಂದ ಹಣ ಬಳಕೆ ಮಾಡಿಕೊಂಡು ಪೂಜೆ ಸಲ್ಲಿಸಬೇಕು ಎಂದು ಮುಜರಾಯಿ ಇಲಾಖೆ ಸುತ್ತೋಲೆಯನ್ನು ಹೊರಡಿಸಲಿದೆ.

ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡುವ ವೇಳೆ ರಾಜ್ಯದಲ್ಲೂ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇವಲ ರಾಮನ ದೇವಾಲಯ ಮಾತ್ರವಲ್ಲ. ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ಸಲ್ಲಿಸಬೇಕು,ಈ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಚಿವರು ಹೇಳಿದ್ದಾರೆ.