ರೈತರಿಗೆ ಕೂಡಲೇ ಪರಿಹಾರ ನೀಡಿ, ಇಲ್ಲದಿದ್ದರೆ ರಾಜೀನಾಮೆ ನೀಡಿ -ಆರ್‌.ಅಶೋಕ್

ಬೆಂಗಳೂರು, ಜ. 9: ಕಾಂಗ್ರೆಸ್‌ ಸರ್ಕಾರ ಕೂಡಲೇ ಬರ ಪರಿಹಾರ ವಿತರಿಸಲಿ, ಇಲ್ಲದಿದ್ದರೆ ಎಲ್ಲರೂ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಸವಾಲು ಹಾಕಿದ್ದಾರೆ.

ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಒಂದು, ಎರಡು ತಿಂಗಳಲ್ಲಿ ರೈತರಿಗೆ ಪ್ರವಾಹ ಹಾನಿ ಪರಿಹಾರ ವಿತರಿಸಲಾಗಿತ್ತು,ಆದರೆ ಕಾಂಗ್ರೆಸ್‌ ಸರ್ಕಾರ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ನಾಯಕರೊಂದಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿದ ಬಳಿಕ ಅಶೋಕ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯಪಾಲರನ್ನು ಭೇಟಿ ಮಾಡಿ ಕಾಂಗ್ರೆಸ್‌ ಸರ್ಕಾರದ ಬೇಜವಾಬ್ದಾರಿತನದ ಬಗ್ಗೆ ತಿಳಿಸಿದ್ದೇವೆ ಎಂದು ಹೇಳಿದರು.

ಸುಮಾರು 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಕಡೆ ಸರ್ಕಾರ‌ ಈತನಕ ತಿರುಗಿ ನೋಡಿಲ್ಲ, ಅಧಿಕಾರಿಗಳು ಸಾಂತ್ವನ ಹೇಳಿಲ್ಲ, ಸಚಿವರು ಕೂಡ ರೈತರ ಬಳಿ ಹೋಗಿಲ್ಲ ಎಂದು ಆರೋಪಿಸಿದರು.

ಉತ್ತರ ಕರ್ನಾಟಕದಲ್ಲಿ ವಲಸೆ ಆರಂಭವಾಗಿದೆ. ಬರಗಾಲ ಶುರುವಾಗಿ ಐದು ತಿಂಗಳಾದರೂ ಸರ್ಕಾರ ನಯಾ ಪೈಸೆ ಪರಿಹಾರ ನೀಡಿಲ್ಲ.

ಎರಡು ಸಾವಿರ ರೂಪಾಯಿ ಪರಿಹಾರ ನೀಡುವ ಬಗ್ಗೆ ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇದುವರೆಗೆ ರೈತರಿಗೆ ಹಣ ತಲುಪಿಲ್ಲ ಎಂದು ಅಶೋಕ್ ದೂರಿದರು.

ಬಸವರಾಜ ಬೊಮ್ಮಾಯಿ‌ ಅವರು ಸಿಎಂ ಆಗಿದ್ದಾಗ ಕೇಂದ್ರದ ನೆರವಿಗೆ ಕಾಯದೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಲಾಗಿತ್ತು ಎಂದು ‌ತಿಳಿಸಿದರು.

ಬಿಜೆಪಿ ಇದ್ದಾಗ ರಾಜ್ಯದಿಂದ ಪರಿಹಾರ ನೀಡಿದ ಬಳಿಕ ಕೇಂದ್ರದಿಂದ ಪರಿಹಾರ ಬಂದಿತ್ತು. ನಮ್ಮ ಸರ್ಕಾರ ದುಪ್ಪಟ್ಟು ಪರಿಹಾರ ನೀಡಿತ್ತು.

ಈಗಿನ ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಆದ್ದರಿಂದ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುತ್ತಿದೆ. ಬರಗಾಲ ಬರಲು ರೈತರು ಕಾಯುತ್ತಿದ್ದಾರೆ ಎಂದು ಸಚಿವರೇ ಹೇಳುತ್ತಾರೆ ಎಂದು ದೂರಿದರು.

ಇವೆಲ್ಲ ಕಾರಣಗಳನ್ನು ಇಟ್ಟುಕೊಂಡು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರದ ಬೇಜವಾಬ್ದಾರಿತನದ ಬಗ್ಗೆ ವಿವರಿಸಿದ್ದೇವೆ ‌ಎಂದು ಹೇಳಿದರು.