ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯಲ್ಲಿ ಇಂದು ಮಹತ್ವದ ಚರ್ಚೆ ನಡೆಸಿದರು.
ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಕುಮಾರಸ್ವಾಮಿ ಅವರ ಜತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಇದ್ದರು.
ಅಮಿತ್ ಶಾ, ನಡ್ಡಾ ಅವರ ಜತೆ ಮೈತ್ರಿ ವಿಷಯ ಸೇರಿ ರಾಜ್ಯ ರಾಜಕೀಯದ ಬಗ್ಗೆ 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದರು.ಅಲ್ಲದೆ ಕರ್ನಾಟಕದ ಎಲ್ಲಾ ವಿದ್ಯಮಾನವನ್ನು ಅವರ ಗಮನಕ್ಕೆ ತಂದರು.
ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜತೆ ಚರ್ಚೆ ನಡೆಸಿದ ನಂತರ ಅಂತಿಮಗೊಳಿಸೋಣ ಎಂದು ಅಮಿತ್ ಶಾ ಹೇಳಿದ್ದಾರೆ
ಅಲ್ಲದೆ; ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್ ಡಿ ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ ಎಂದು ಶಾ ಮತ್ತು ನಡ್ಡಾ ಅವರು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಒಂದು ವರ್ಷ ತುಂಬುವುದಕ್ಕೆ ಮೊದಲೇ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿದೆ. ಜನರು ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಜನರ ಗಮನಕ್ಕೆ ಪರಿಣಾಮಕಾರಿಯಾಗಿ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಯಿತು ಎಂದು ನಂತರ ಕುಮಾರಸ್ವಾಮಿ ಮಾಧ್ಯಮ ಗಳಿಗೆ ತಿಳಿಸಿದರು.
ಮಾತುಕತೆಯ ಬಗ್ಗೆ ಸಂತಸ ವ್ಯಕ್ತಪಡಿಸಿ ಹೆಚ್.ಡಿ.ಕೆ ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರದ ಬಗ್ಗೆಯೂ ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ರಾಜ್ಯ ಸರಕಾರ ಈವರೆಗೂ ಬಿಡಿಗಾಸನ್ನು ಬರಪೀಡಿತ ಜನರಿಗೆ ಕೊಟ್ಟಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಈ ಬಗ್ಗೆ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.

