ವಿಶ್ವಕ್ಕೆ ಮಾದರಿ ಸಂವಿಧಾನ ನಮಗೆ ನೀಡಿದ ಅಂಬೇಡ್ಕರ್ ರಿಗೆ ಗೌರವ ಸಲ್ಲಿಸುವುದು ಎಲ್ಲರ ಕರ್ತವ್ಯ -ಸಿಎಂ

ಬೆಂಗಳೂರು: ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬಿದೆ, ಈ ಸಂದರ್ಭದಲ್ಲಿ ನಾಡಿನ ಜನತೆಗೆ ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಮಾಣಿಕ್‌ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ನಂತರ ನಾಡಿನ ಜನರಿಗೆ ಸಿಎಂ
ಸಂದೇಶ ನೀಡಿದ್ದಾರೆ.

ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು ತಿಳಿಸಿದ್ದಾರೆ.

ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ’ ಎಂದು ತ್ರಿಕರಣಪೂರ್ವಕವಾಗಿ ನಂಬಿಕೊಂಡು ಬಂದಿರುವ ನಮ್ಮ ಸರ್ಕಾರ, ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ ಸರ್ವರಿಗೂ ಸಮಪಾಲು ಸಿಗಬೇಕೆಂಬ ಸರ್ವೋದಯದ ಉದಾತ್ತ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಗೌರವ ಮತ್ತು ಅದರ ಆಶಯಗಳ ಬಗ್ಗೆ ಬದ್ಧತೆ ಇರಲೇಬೇಕು. ಸಂವಿಧಾನೇತರ ಶಕ್ತಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗ ಇಲ್ಲ ಎಂದು ಹೇಳಿದ್ದಾರೆ.

ನಮ್ಮ ಯೋಚನೆಗಳು ಮತ್ತು ಯೋಜನೆಗಳು ಸಂವಿಧಾನದ ಆಶಯಗಳೇ ಆಗಿವೆ. ನಮ್ಮ ಆಡಳಿತದ ಕರ್ನಾಟಕ ಮಾದರಿ ಬಗ್ಗೆ ಇಡೀ ದೇಶ ಮಾತ್ರ ಅಲ್ಲ ವಿಶ್ವಶ್ರೇಷ್ಠ ಆರ್ಥಿಕ ತಜ್ಞರು ಕೂಡಾ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಕನ್ನಡಿಗರೆಲ್ಲರಿಗೂ ಅಭಿಮಾನದ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬರಗಾಲ ಪ್ರಯುಕ್ತ ಸರ್ಕಾರ ನೀಡುತ್ತಿರುವ ಪರಿಹಾ,ಗ್ಯಾರಂಟಿ ಯೋಜನೆಗಳ ಪ್ರಯೋಜನಗಳು,ಸರ್ಕಾರದ ಮುಂದಿನ ಗುರಿ ಮತ್ತು ಯೋಜನೆಗಳನ್ನು ಮುಖ್ಯ ಮಂತ್ರಗಳು ವಿವರಿಸಿದ್ದಾರೆ.

ದಾವೋಸ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಲು ಎನ್ಟಿಟಿ ಡೇಟಾ, ಆ್ಯಬ್ ಸಮೂಹ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳು ಉತ್ಸುಕತೆ ತೋರಿದೆ. ಇದರಿಂದ ರಾಜ್ಯದ ಆರ್ಥಿಕತೆಯ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಬಸವಣ್ಣ ನಮ್ಮ ನಾಡಿನ ಸಾಮಾಜಿಕ ನ್ಯಾಯದ ಮೊದಲ ಹರಿಕಾರ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸುವ ಬಸವಮಾರ್ಗದಲ್ಲಿ ನಡೆಯುವವನು ನಾನು. ಈ ಬದ್ದತೆಯಂದಾಗಿಯೇ ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದು ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರು ನೀಡಿರುವ ಜನಮತದಲ್ಲಿ, ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜದ ರಕ್ಷಣೆಯ ಸಂದೇಶವೂ ಇದೆ ಎನ್ನುವುದನ್ನು ನಮ್ಮ ಸರ್ಕಾರ ಅರ್ಥಮಾಡಿಕೊಂಡಿದೆ.

ನಮ್ಮ ಸರ್ಕಾರ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ವ ಸನ್ನದ್ಧವಾಗಿದೆ. ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು.

ಚುನಾಯಿತ ಸರ್ಕಾರ ಇಲ್ಲವೇ ಜನಪ್ರತಿನಿಧಿಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಜಾತಿ-ಧರ್ಮಗಳಂತಹ ಭಾವನಾತ್ಮಕ ವಿಷಯಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು ಮತ್ತು ಸಂವಿಧಾನಕ್ಕೆ ಬಗೆವ ದ್ರೋಹವಾಗಿದೆ.

ಸಹೃದಯಿ ಕನ್ನಡಿಗರು ಇಂತಹ ಹುನ್ನಾರಗಳಿಗೆ ಬಲಿಯಾಗದೆ ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ತೊಡಗಿರುವ ನಮ್ಮ ಸರ್ಕಾರದ ಜೊತೆ ದೃಡಚಿತ್ತದಿಂದ ನಿಲ್ಲಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂಬ ತತ್ವವನ್ನು ಮರೆಯದಿರೋಣ. ಈ ಮೂಲಕ ಭಾರತದ ಗಣರಾಜ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿಸೋಣ ಎಂದು ಸಿಎಂ ಆಶಿಸಿದ್ದಾರೆ.

ಕಾರ್ಯಕ್ರಮ ದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು.ಸರ್ಕಾರದ ಕಾರ್ಯಕ್ರಮ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಮಕ್ಕಳ ಕವಾಯತು ಎಲ್ಲರ ಮನ ಸೂರೆಗೊಂಡವು.

ವಿದ್ಯಾರ್ಥಿನಿಯರು ಮಹಿಳೆಗೆ ಶಿಕ್ಷಣ ಕೊಡಿ ಮತ್ತು ಮಹಿಳಾ ಸಬಲೀಕರದ ನೃತ್ಯ ರೂಪಕ ಎಲ್ಲರ ಮನಸೆಳೆಯಿತು.