ಬೆಂಗಳೂರು: ನಮ್ಮ ಸರ್ಕಾರದಲ್ಲಿ ಡಿಸಿ ಸೇರಿದಂತೆ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಬದ್ದರಾಗಿರಬೇಕು, ಇಲ್ಲದಿದ್ದರೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲೇ ಸಿಎಂ ಈ ಎಚ್ಚರಿಕೆ ನೀಡಿದರು.
ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎಂಬ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಕಡಕ್ಕಾಗಿ ಹೇಳಿದರು.
ಸರ್ಕಾರ ಬಂದು 8 ತಿಂಗಳಾಗಿದೆ. ಜಿಲ್ಲಾಧಿಕಾರಿಗಳು,ಸಿಇಒ ಗಳು ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎಂಬ ಮಾಹಿತಿಗಳನ್ನು ಸಭೆಗೆ ನೀಡಬೇಕು ಎಂದು ಸೂಚಿಸಿದರು.
ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವಲ್ಲಿ ಅನುಭವ ಎಷ್ಟು ನೆರವಾಗಿದೆ ಎಂಬ ಮಾಹಿತಿಯನ್ನು ಸಿಎಂ ಪಡೆದುಕೊಂಡರು
ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಏಕೆ ಆಗಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.
ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ,ಅಂತವರೇ ಹೆಚ್ಚು ಹೇಳಿಕೊಂಡು ತಿರುಗುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ ಕೂಡಲೇ ತಾಂತ್ರಿಕ ಸಮಸ್ಯೆ ಬಗೆಹರಿಸಿ ಎಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ಸಾರ್ವಜನಿಕರು ರೆವಿನ್ಯೂ ಇಲಾಖೆ, ತಹಶೀಲ್ದಾರ್ ಮತ್ತು ಎಸಿ,ಡಿಸಿ ಕಚೇರಿಗಳಿಗೆ ಅಲೆಯುವುದು ಕಡಿಮೆ ಆಗಿದೆಯಾ ಜನರ ಸಮಸ್ಯೆಗೆ ಪರಿಹಾರ ಸಿಗುತ್ತಿದೆಯೆ ಎಂದು ಪ್ರಶ್ನಿಸಿದರು.
ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎಂದು ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ ಮೆಚ್ಚುಗೆ ವ್ಯಕ್ತಪಡಿಸಿದರು ಸಿಎಂ.
ಕೋಲಾರದ ಹಾಸ್ಟೆಲ್ ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ ಎಂದು ಕಾರವಾಗಿ ಪ್ರಶ್ನಿಸಿ, ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಜನ ಹೆಚ್ಚು ಹೋಗೋದು ಕೃಷಿ, ಕಂದಾಯ, ಪೊಲೀಸ್ ಇಲಾಖೆ, ಠಾಣೆಗಳಿಗೆ. ನೀವು ಎಷ್ಟು ಠಾಣೆಗಳಿಗೆ ಭೇಟಿ ನೀಡಿದ್ದೀರಿ ಎಂದು ಸಿದ್ದು ಪ್ರಶ್ನಿಸಿದರು.
ನಿಮ್ಮ ಲೆವೆಲ್ ನಲ್ಲಿ ಸಮಸ್ಯೆ ಬಗೆಹರಿಯದೆ ಹೋದರೆ, ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅಧಿಕಾರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳು ಹಾಜರಿದ್ದರು.

