ವಿಜಯಪುರ: ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಮುದ್ದೇಬಿಹಾಳ ಹೆಲಿಪ್ಯಾಡಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಹಣಕೊಟ್ಟು ಶಾಸಕರನ್ನು ಕೊಂಡುಕೊಂಡು ಬಹುಮತ ಮಾಡಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ಸಿನಿಂದ ಹಲವಾರು ನಾಯಕರು ದುಂಬಾಲು ಬಿದ್ದಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರು ಹಿಂದೆಯೂ ಎರಡು ಬಾರಿ ಹಾಗೇ ಮಾಡಿದ್ದಾರೆ ಎಂದರು.
2008 ರಿಂದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಇದ್ದಾಗಲೂ ಇದನ್ನೇ ಮಾಡಿದ್ದು ಎಲ್ಲಾ ಕಡೆ ಕೊಂಡುಕೊಳ್ಳಲು ಪ್ರಯತ್ನ ಮಾಡುತ್ತಾರೆ ಕೊಂಡುಕೊಳ್ಳಲು ಜನ ಸಿಕ್ಕರೆ ಸರ್ಕಾರ ರಚನೆ ಮಾಡುತ್ತಾರೆ ಎಂದು ಕುಟುಕಿದರು.
ರಾಜ್ಯದಲ್ಲಿ ಬಿಜೆಪಿಗೆ ಜನ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ. 2008, 2013, 2018 ರಲ್ಲಿ ಅವರು ಬಹುಮತದಿಂದ ಗೆದ್ದೇ ಇಲ್ಲ, ಕಾಂಗ್ರೆಸ್ ಪಕ್ಷ 2013ರಲ್ಲಿ ಗದ್ದಿದೆ. 2018 ರಲ್ಲಿ ಸೋತು ಪುನ: 2023 ರಲ್ಲಿ 136 ಸ್ಥಾನಗಳನ್ನು ಪಡೆದು ಗೆದ್ದಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಹಾಗೂ ತೀರ್ಪಿನಂತೆ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬರುತ್ತಾರೆ ಎಂದು ಟೀಕಿಸಿದರು.
ಮಂಡ್ಯದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಕಾಂಗ್ರೆಸ್ ಕಾಶ್ಮೀರದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ನೀಡುವುದಿಲ್ಲ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷ ರಾಷ್ಟ್ರಧ್ವಜಕ್ಕೆ ಸದಾ ಗೌರವ ನೀಡುತ್ತದೆ. 1935 ರಲ್ಲಿ ದೇಶಕ್ಕೆ ರಾಷ್ಟ್ರಧ್ವಜವನ್ನು ನೀಡಿದ್ದು ಕಾಂಗ್ರೆಸ್ ಪಕ್ಷ ಎಂದು ಸಿಎಂ ಹೇಳಿದರು.

