ಎನ್ ಡಿ ಆರ್ ಎಫ್ ನಿಧಿ: ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯಕ್ಕೆ ಎನ್ ಡಿ ಆರ್ ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ,
ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು ಎಂದು ಹೇಳಿದರು.

ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ ಎಂದು ತಿಳಿಸಿದರು.

ಬರದ ಸಂದರ್ಭ,ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗೆ ಸ್ಪಂದಿಸಬೇಕು ಎಂಬ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ ಆದರೆ ಇದುವರೆಗೂ ಕೇಂದ್ರ ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ಸ್ಪಂದಿಸಲೇ ಇಲ್ಲ ಎಂದು ‌ಬೇಸರಪಟ್ಟರು ಸಿಎಂ.

ನಿಯಮವಾಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಪರಿಶೀಲನೆ ನಡೆಸಿ ಕೇಂದ್ರಕ್ಕೆ ಐಎಂಸಿಟಿ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದು ನಿಯಮ, ಎನ್ ಡಿ ಆರ್ ಎಫ್ ನಿಯಮಾವಳಿಗಳನ್ನು ಸಿದ್ದರಾಮಯ್ಯ ಓದಿ‌ ವಿವರಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರೂ ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ, ಡಿಸೆಂಬರ್ 20 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ.

ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿಯವರನ್ನು‌ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ ಆದರೂ ಪರಿಹಾರ ಸಿಗಲಿಲ್ಲ ಎಂದು ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದರು.

4600 ಕೋಟಿ ಇನ್ ಪುಟ್ ಸಬ್ಸಿಡಿಗೆ ಹಣ ಬೇಕು,ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ ಎನ್ ಡಿ ಆರ್ ಎಫ್ ನಿಧಿ ಬಂದೇ ಇಲ್ಲ ಆದ್ದರಿಂದ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾಯಿತು ಎಂದು ಸಿಎಂ ತಿಳಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೇಂದ್ರದಿಂದ ಪರಿಹಾರ ಪಡೆಯಲು ರಾಜ್ಯ ಸರ್ಕಾರ ಮಾಡಿದ ಪ್ರಯತ್ನಗಳನ್ನು ತಿಳಿಸಿದರು.