ಸಿದ್ದರಾಮಯ್ಯ ರಾಜೀನಾಮೆಗೆ ಅಶೋಕ್ ಆಗ್ರಹ

ಆನೇಕಲ್‌: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು,ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ತಾಲಿಬಾನ್‌ ಸರ್ಕಾರ ಆಡಳಿತ ನಡೆಸುತ್ತಿದೆ, ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ಕಾಂಗ್ರೆಸ್‌ ಉಂಟುಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ, ನೀವು ನಮ್ಮ ಮತಬ್ಯಾಂಕ್‌ ಆಗಿದ್ದು, ನಿಮ್ಮ ಪೂರ್ತಿ ರಕ್ಷಣೆ ಮಾಡುತ್ತೇವೆ ಎಂದು ಸರ್ಕಾರವೇ ಹೇಳಿದೆ. ಜೈ ಶ್ರೀರಾಮ್‌ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್‌ ಜಿಂದಾಬಾದ್‌ ಎಂದವರಿಗೆ ಬಿರಿಯಾನಿ ಜೊತೆಗೆ ಪಾಸ್‌ ಕೂಡ ಕೊಡುತ್ತಾರೆ ಎಂದು ಅಶೋಕ್ ಟೀಕಾಪ್ರಹಾರ ನಡೆಸಿದರು.

ಡಿ.ಕೆ.ಸುರೇಶ್‌ ಅವರ ರ‍್ಯಾಲಿಯಲ್ಲಿ ಕೆಲವರು ಪಾಕಿಸ್ತಾನ ಜೈ ಎಂದಿದ್ದಾರೆ ಆದರೆ ಅವರು ಏನೂ ಮಾತಾಡದೆ ಸುಮ್ಮನೆ ನಿಂತಿದ್ದರು. ಈಗಾಗಲೇ ಅವರು ದೇಶ ಒಡೆಯುವ ಮಾತನಾಡಿದ್ದಾರೆ. ಭಾರತಮಾತೆಯನ್ನು ಪ್ರೀತಿಸುವ ಬೆಂಗಳೂರು ಗ್ರಾಮಾಂತರದ ಜನರು ಇವರಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಹೇಳಿಕೆ ನೀಡಿದ ನಂತರ ಕ್ಷಮೆ ಕೇಳುತ್ತಾರೆ. ಕಾಂಗ್ರೆಸ್‌ ಕಾರ್ಪೊರೇಟರ್‌ ನೇಹಾ ತಂದೆ ತಮ್ಮ ಜೊತೆ ಈಗ ಯಾರೂ ಇಲ್ಲ ಎಂದಿದ್ದಾರೆ. ಕಾಂಗ್ರೆಸ್‌ ನಾಯಕರು ತಮ್ಮ ಕಾರ್ಯಕರ್ತರನ್ನೇ ಬಿಟ್ಟುಬಿಡುತ್ತಾರೆ ಎಂದು ಅಶೋಕ್ ವ್ಯಂಗ್ಯವಾಡಿದರು.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ಚೊಂಬು ಗ್ಯಾರಂಟಿ. ರಾಹುಲ್‌ ಗಾಂಧಿಗೆ ನಾವು ಚೊಂಬು ಕಳುಹಿಸಿಕೊಡಲಿದ್ದೇವೆ ಅವರು ವಿದೇಶಕ್ಕೆ ಹೋಗಿ ಏನಾದರೂ ಮಾಡಲಿ, ಸೋತ ಬಳಿಕ ಅವರು ಖಂಡಿತ ವಿದೇಶಕ್ಕೆ ಹೋಗುತ್ತಾರೆ ಎಂದು ಗೇಲಿ ಮಾಡಿದರು.