ಸಿದ್ದರಾಮಯ್ಯ ಭೇಟಿ ಮಾಡಿದ ತಮಿಳುನಾಡು ಸಚಿವ ಡಾ.ಕೆ.ಪೊನ್ನುಮುಡಿ

ಬೆಂಗಳೂರು: ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಡಾ.ಕೆ.ಪೊನ್ನುಮುಡಿ ಮತ್ತು ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಚರ್ಚಿಸಿದರು.

ಡಿ ಲಿಮಿಟೇಷನ್ ಮತ್ತಿತರ ಸಂಗತಿಗಳ ವಿಚಾರದಲ್ಲಿ ಧ್ವನಿ ಎತ್ತುವಂತೆ, ಪ್ರತಿಭಟನೆ ಜೊತೆಗೆ ನಿಲ್ಲುವಂತೆ ಇಬ್ಬರೂ ಸಿದ್ದು ಬಳಿ ಮನವಿ ಮಾಡಿದರು.

ಇದಕ್ಕೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳ ಜೊತೆ ಇದೇ ವಿಚಾರಗಳ ಬಗ್ಗೆ ಚರ್ಚಿಸಿದರು.

ತಮಿಳುನಾಡು ಸರ್ಕಾರದ ನಿಯೋಗ ಮತ್ತು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಚರ್ಚಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ತಮ್ಮದೂ ಬೆಂಬಲ ಸೂಚಿಸಿದ್ದಾರೆ.

ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ತಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.