ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸದಿದ್ದರೆ ಕಠಿಣ ಕ್ರಮ- ಮಹದೇವಪ್ಪ

ತಿ.ನರಸೀಪುರ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಇದರಲ್ಲಿ
ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ‌ ಸಚಿವ‌‌
ಡಾ.ಹೆಚ್.ಸಿ.ಮಹದೇವಪ್ಪ
ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದರು.

ಟಿ.ನರಸೀಪುರ ತಾಲ್ಲೂಕಿನ ಪುರಸಭೆ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಈ ತಾಲ್ಲೂಕನ್ನು ಪ್ರತಿನಿಧಿಸುತ್ತೇವೆ, ಯಾವುದೇ ಕಾರಣಕ್ಕೂ ಇಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಬೇಕು ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯನ್ನು ಈಡೇರಿಸುವುದು ಸರ್ಕಾರದ ಕರ್ತವ್ಯವಾಗಿದೆ‌. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಿಸಲು ಜವಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಹೇಳಿದರು.

ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಎರಡು ದಿನ ರಾಜ್ಯಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸರ್ಕಾರವು ಜನರ ಪರ ಇದೆ ಎಂಬ ಆತ್ಮವಿಶ್ವಾಸ ಮೂಡಿಸುವುದರಲ್ಲಿ ಅಧಿಕಾರಿಗಳ ಪಾತ್ರ ಹೆಚ್ಚಿದೆ. ಈ ನಿಟ್ಟಿನಲ್ಲಿ ಕಚೇರಿಯಲ್ಲಿ ಅಧಿಕಾರಿಗಳು ಕೂರಬಾರದು. ಜನರ ಬಳಿಗೆ ತೆರಳಬೇಕು. ಅವರ ಕಷ್ಟಗಳನ್ನು ಆಲಿಸಿ ಪರಿಹರಿಸಬೇಕು ಎಂದು ತಿಳಿಸಿದರು.

ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೌಲಭ್ಯ, ಪಡಿತರ ವಿತರಣೆ ಸೇರಿದಂತೆ ಎಲ್ಲಾ ಬಗೆಯ ಮೂಲಭೂತ ಸೌಕರ್ಯಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಶ್ರಮವಹಿಸಬೇಕು ಎಂದು ಹೇಳಿದರು.

ತಾಲ್ಲೂಕಿನಲ್ಲಿ 44,136 ಹೆಕ್ಟೇರ್ ಸಾಗುವಳಿ ವಿಸ್ತೀರ್ಣವಿದೆ. ಕೃಷಿಗೆ ಉಪಯೋಗವಿರುವ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಸಿರೆಲೆ ಬಿತ್ತನೆಗೆ ಕ್ರಮವಹಿಸಿ. ರಸಗೊಬ್ಬರ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ರೈತರಿಗೆ ವ್ಯಾಪಕ ಅರಿವು ಮೂಡಿಸಿ ಸಾವಯವ ಗೊಬ್ಬರ ಬಳಸುವಂತೆ ತಿಳಿಸಿ ಎಂದು ಸೂಚಿಸಿದರು.

ಬೀದಿ ದೀಪ, ರಸ್ತೆ, ಚರಂಡಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡಬೇಕು,ಸ್ವಚ್ಛತೆ ಕಾಪಾಡಬೇಕು, ಜವಜ್ದಾರಿಯಿಂದ ಕೆಲಸ ಮಾಡಿ ಎಂದು ಪುರಸಭೆ ಮುಖ್ಯಾಧಿಕಾರಿಗೆ ಸಚಿವರು ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಸಂಸದರಾದ ಸುನೀಲ್ ಬೋಸ್ ಅವರು ಹಕವು ಸಲಹೆ ಗಳನ್ನು ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಪುರಸಭೆ ಅಧ್ಯಕ್ಷರಾದ ವಸಂತ ಶ್ರೀಕಂಠ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ತಹಸಿಲ್ದಾರ್ ಸುರೇಶ್ ಆಚಾರ್, ತಾಲ್ಲೂಕು ಪಂಚಾಯತ್ ಇಒ ಆನಂತ ರಾಜು ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಕೆ.ಡಿ.ಪಿ ಸಭೆಯ ನಾಮನಿರ್ದೇಶಿತ ಸದಸ್ಯರು ಪಾಲ್ಗೊಂಡಿದ್ದರು.