ಜೂನ್ 30 ಕೆ ಆರ್ ಎಸ್ ಗೆ ಸಿಎಂ ಬಾಗಿನ- ಚೆಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುತ್ತಿದ್ದು, ಜೂನ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಜೂನ್ 30 ರಂದು ಬೆಳಿಗ್ಗೆ 10.30 ರ ನಂತರ ಕೆ‌ಆರ್.ಎಸ್ ಗೆ ಆಗಮಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ ಅಧಿಕಾರಿಗಳು ಅಗತ್ಯ ಸಿದ್ಧತೆ‌ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ವೇದಿಕೆ, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.

ಸರ್ಕಾರ ಇ- ಆಫೀಸ್ ನಲ್ಲಿ ಕಾರ್ಯನಿರ್ವಹಿಸಲು ಅವಶ್ಯಕವಿರುವ ಲ್ಯಾಪ್ ಟಾಪ್ ಗಳನ್ನು ಜಿಲ್ಲೆಯ 185 ಗ್ರಾಮ ಆಡಳಿತಾಧಿಕಾರಿಗಳಿಗೆ ಒದಗಿಸಿದ್ದು,ಇಂದು ಸಂಕೇತಿಕವಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ ಚಲುವರಾಯಸ್ವಾಮಿ ಲ್ಯಾಪ್‌ ಟಾಪ್ ವಿತರಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಆಡಳಿತದಲ್ಲಿ ಸರ್ಕಾರಿ ಕೆಲಸಗಳನ್ನು ಇ- ಆಫೀಸ್ ಮೂಲಕ ನಿರ್ವಹಿಸ ಬೇಕಿದ್ದು, ಕೆಲಸವನ್ನು ಪಾರದರ್ಶಕ ಹಾಗೂ ದಕ್ಷತೆಯಿಂದ ನಿರ್ವಹಿಸಿ ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇ ಗೌಡ, ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಕಾ.ನೀ.ನಿ.ನಿ ಅಧೀಕ್ಷಕ‌ ಅಭಿಯಂತರ ರಘುರಾಮ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.