ಪ್ರಿಯಾಂಕ್‌ ಖರ್ಗೆ ಅವರಿಗೆ ಬಂದಿದೆ ಎನ್ನಲಾಗಿರುವ ಬೆದರಿಕೆ ಕರೆಗಳು ಸುಳ್ಳು:ವಿಶ್ವನಾಥ್

ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಸಿಎಂಗೆ ಪತ್ರ ಬರೆದಿರುವ ಕ್ರಮವನ್ನು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಆರ್‌ಎಸ್‌ಎಸ್‌ನಿಂದ ರಾಜ್ಯದಲ್ಲಿ ಯಾವ ಅನಾಹುತ ಆಗಿದೆ ಎಂದು ಪ್ರಶ್ನಿಸಿದರು.

ಪ್ರಿಯಾಂಕ್‌ ಖರ್ಗೆ ಅವರು ಕೆಲಸಕ್ಕೆ ಬಾರದ ವಿಚಾರವನ್ನು ಮಾತನಾಡುತ್ತಿದ್ದಾರೆ, ಅವರಿಗೆ ಬಂದಿದೆ ಎನ್ನಲಾಗಿರುವ ಬೆದರಿಕೆ ಕರೆಗಳು ಸುಳ್ಳು ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಯಾರು ಬೆದರಿಕೆ ಹಾಕುತ್ತಾರೆ, ತಾನು ಸಿಎಂ ವಿರುದ್ಧ ಟೀಕೆ ಮಾಡಿದರೂ ಇದುವರೆಗೂ ಯಾರೂ ಬೆದರಿಕೆ ಹಾಕಿಲ್ಲ ಎಂದು ವಿಶ್ವನಾಥ್ ಹೇಳಿದರು.

ವಾಸ್ತವವಾಗಿ ಶಾಲೆಗಳಲ್ಲಿ ಮಕ್ಕಳಿಗೆ ಸರಿಯಾಗಿ ಊಟ ಹಾಗೂ ಪಾಠ ಸಿಗುತ್ತಿಲ್ಲ. ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ಬಳಸಿಕೊಂಡಿರುವುದೇ ಇದಕ್ಕೆಲ್ಲಾ ನೇರ ಕಾರಣ ಎಂದು ಆರೋಪಿಸಿದರು.

ಎಸ್‌ಎಸ್‌ಎಲ್‌ಸಿಯಲ್ಲಿ 33 ಅಂಕ ಪಡೆದರೂ ಸಾಕೆಂಬ ಹೊಸ ನಿಯಮದಿಂದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ತೀವ್ರವಾಗಿ ಕುಂಠಿತವಾಗುತ್ತದೆ. ಇದರಿಂದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಅದರಲ್ಲೂ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಆತನ ಸ್ನೇಹಿತರು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ವಿಶ್ವನಾಥ್ ಗಂಭೀರ ಆರೋಪ ಮಾಡಿದರು.