ಹಿರಿಯೂರು ಬಳಿ ಬಸ್ ಗೆ ಕಂಟೈನರ್ ಲಾರಿ ಡಿಕ್ಕಿ:9 ಮಂದಿ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಐದು ಮಂದಿ ಸಜೀವ ದಹನವಾಗಿದ್ದಾರೆ.ನಾಲ್ಕು ಮಂದಿ ತೀವ್ರ ಸುಟ್ಟ ಗಾಯಗಳಿಂದಾಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಟ್ರಾವೆಲ್ಸ್‌ನ ಸ್ಲೀಪರ್ ಬಸ್‌ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದು ಬಸ್ ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿದೆ.ಈ ಅವಘಡದಲ್ಲಿ 21 ಮಂದಿ ಮಭೀರವಾಗಿ ಗಾಯಗೊಂಡಿದ್ದಾರೆ.

ಈ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಹಾಗಾಗಿ ಮೃತರ ಕುಟುಂಬಗಳಿಗೆ ಒಟ್ಟು 7 ಲಕ್ಷ ರೂಪಾಯಿ ನೆರವು ದೊರೆಯಲಿದೆ.

ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಹಿರಿಯೂರು, ಚಿತ್ರದುರ್ಗ ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ

ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಡಿವೈಡರ್ ದಾಟಿ ಬಸ್‌ಗೆ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಬೆಂಕಿ ಕೆಲವೇ ನಿಮಿಷಗಳಲ್ಲಿ ಇಡೀ ಬಸ್‌ಗೆ ಹರಡಿತು. ಬಸ್ ಚಾಲಕ, ಕಂಡಕ್ಟರ್ ಮತ್ತು ಕ್ಲೀನರ್ ಮೂವರು ಕಿಟಕಿ ಮೂಲಕ ಹೊರಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಹೆಚ್ಚಿನ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದ ಕಾರಣ ಹೊರಬರಲು ಆಗಲಿಲ್ಲ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು ಹಾರಿ ಬಸ್‌ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಸಾರಿಗೆ ಆಯುಕ್ತರಾದ ಯೋಗೇಶ್ವರ್ ಹಾಗೂ ಸಹಾಯಕ ಆಯುಕ್ತರಾದ ಓಂಕಾರೇಶ್ವರಿ ಅವರು ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.