ಬೆಂಗಳೂರು: ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿಯನ್ನು ಶುಕ್ರವಾರ ಬಿಡುಗಡೆಗೊಳಿಸಿ ಮಾತನಾಡಿದರು.
ರಾಜ್ಯದ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕೆಂದು ಸಿಎಂ ಸಲಹೆ ನೀಡಿದರು.
ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಮೇಲೆ ನಿಂತಿದೆ. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಎಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಬೇಕಿದೆ. ಇಲ್ಲವಾದಲ್ಲಿ ಅಸಮಾನತೆ ಹೋಗಲು ಸಾಧ್ಯವಿಲ್ಲ, ಅಂತೆಯೇ ಅಸಮಾನತೆ ತೊಲಗದೇ, ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುವುವೂ ಅಸಾಧ್ಯ ಎಂದು ಹೇಳಿದ್ದನ್ನು ತಿಳಿಸಿದರು.
ಎಲ್ಲರಿಗೂ ಸಮಾನ ಅವಕಾಶ ದೊರೆತು, ಸಮಾಜದ ಮುಖ್ಯವಾಹಿನಿಗೆ ಬರುವಂತಾದರೆ ಮಾತ್ರ ಸಮಾನತೆ ಬರಲು ಸಾಧ್ಯ. ನಮ್ಮ ಸಮಾಜ ಜಾತಿ ವ್ಯವಸ್ಥೆಯಿಂದ ಕೂಡಿದೆ. ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು ಎಂದು ಮುಖ್ಯ ಮಂತ್ರಿಗಳು ಹೇಳಿದರು.
ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇನ್ನೂ ಜಾತಿ ವ್ಯವಸ್ಥೇ ನಿರ್ಮೂಲನೆಯಾಗಿಲ್ಲ. ಎಲ್ಲಾ ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಸ್ವಜಾತಿ ಪಕ್ಷಪಾತ ಮಾಡಬಾರದು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಬಡವರ ಒಳಿತಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು, ವ್ಯವಸ್ಥೆಯನ್ನು ಸರಿ ಮಾಡುವ ಪ್ರಯತ್ನವನ್ನು ಮಾಡಬೇಕು. ತಹಶೀಲ್ದಾರ್, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಸಿಎಂ ತಿಳಿಹೇಳಿದರು.
ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಸಚಿವರಾದ ಈಶ್ವರ ಖಂಡ್ರೆ, ಭೈರತಿ ಸುರೇಶ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

