ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಲಿ: ಸಿ.ಟಿ.ರವಿ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸರ್ಕಾರವನ್ನು‌ ಒತ್ತಾಯಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾರ್ಪೊರೇಟರ್ ದೂರಿನ ಮೇಲೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅವರನ್ನು ಬಂಧಿಸಿ ಪೊಲೀಸರು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆ, ಮಹಿಳಾ ದೌರ್ಜನ್ಯ. ಕೂಡಲೇ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಲೇಬೇಕು ಎಂದು ಆಗ್ರಹಿಸಿದರು.

ಮಾನವೀಯ ಜಗತ್ತು ತಲೆ ತಗ್ಗಿಸುವಂತೆ ನಡೆದುಕೊಂಡಿದ್ದಾರೆ. ಮಹಿಳಾ ಆಯೋಗ ಸುಮೋಟೋ ಕೇಸ್ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸುಳ್ಳು ದೂರು ನೀಡಿರುವ ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಪೊಲೀಸರು ಕಾಂಗ್ರೆಸ್ ಕಾರ್ಪೊರೇಟರ್ ಅಡಿಯಾಳಿನಂತೆ ಕೆಲಸ ಮಾಡಿದ್ದಾರೆ,ತಕ್ಷಣ ಪೊಲೀಸರು, ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಕ್ರಮ ಆಗಲಿ ಎಂದು ಸಿ.ಟಿ.ರವಿ ಆಗ್ರಹಿಸಿದರು.