ಬೆಂಗಳೂರು: ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ.
2020 ಹಾಗೂ 2021 ನೇ ಸಾಲಿನ ಪ್ರಶಸ್ತಿಗಳು ಇವು.
ಹಿರಿಯ ನಟಿ ಡಾ.ಜಯಮಾಲಾ, ಸಾ.ರಾ.ಗೋವಿಂದು ಅವರಿಗೆ ಡಾ.ರಾಜ್‍ಪ್ರಶಸ್ತಿ, ಎಂ.ಎಸ್.ಸತ್ಯು, ಕೆ.ಶಿವರುದ್ರಯ್ಯ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ಹಿರಿಯ ಸಿನಿಮಾ ಛಾಯಾಗ್ರಾಹಕ ಪ್ರಗತಿ ಅಶ್ವತ್ಥನಾರಾಯಣ, ಎಂ.ಕೆ.ಸುಂದರರಾಜ್ ಅವರು ಡಾ.ವಿಷ್ಣುವರ್ಧನ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.
2020 ಹಾಗೂ 2021 ರ ಜೀವಮಾನ ಸಾಧನೆ ಪ್ರಶಸ್ತಿಗಳ ಆಯ್ಕೆಗೆ ಹಿರಿಯ ಸಾಹಿತಿ, ಚಲನಚಿತ್ರ ನಿರ್ದೇಶಕ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯಲ್ಲಿ, ಹಿರಿಯ ಸಿನೆಮಾಟೋಗ್ರಾಫರ್ ಬಿ.ಎಸ್.ಬಸವರಾಜ, ಹಿರಿಯ ಪತ್ರಕರ್ತ ರಘುನಾಥ ಚ.ಹ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಹಾಗೂ ವಾರ್ತಾ ಇಲಾಖೆಯ ಆಯುಕ್ತರು ಸದಸ್ಯರಾಗಿದ್ದರು, ಸಮಿತಿಯು ಚರ್ಚಿಸಿದ ಬಳಿಕ ಸರ್ಕಾರಕ್ಕೆ ಕಳುಹಿಸಿದ್ದ ಸಲಹೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅನುಮೋದನೆ ನೀಡಿದ ಬಳಿಕ ಸರ್ಕಾರದ ಆದೇಶ ಪ್ರಕಟಿಸಲಾಗಿದೆ. ಈ ಪ್ರಶಸ್ತಿಗಳು ತಲಾ 50 ಗ್ರಾಂ ಚಿನ್ನದ ಪದಕ ಹಾಗೂ ತಲಾ 5 ಲಕ್ಷ ರೂ ನಗದು ಪುರಸ್ಕಾರ ಒಳಗೊಂಡಿದೆ ಎಂದು ಪ್ರಕಟಣೆಯಲ್ಲಿ ಹೇಮಂತ್ ನಿಂಬಾಳ್ಕರ್ ಮಾಹಿತಿ ನೀಡಿದ್ದಾರೆ.

