ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ ಪಕ್ಷ ಮುನ್ನಡೆಸುವ ಜವಾಬ್ದಾರಿ ಹೊತ್ತಿರುವುದು ಅದರಲ್ಲೂ ಅತಿ ಚಿಕ್ಕ ವಯಸ್ಸಿನಲ್ಲಿ ಈ ಜವಾಬ್ದಾರಿ ವಹಿಸಿಕೊಂಡಿರುವುದು ವಿಶೇಷ.
ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡ ಬೆನ್ನಲ್ಲೇ ಪಕ್ಷ ನಡೆಸಿದ ಚುನಾವಣೆಯಲ್ಲಿ ನಿತಿನ್ ಅವರು ಅವಿರೋಧವಾಗಿ ಆಯ್ಕೆಯಾದರು.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ,ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅವರ ಸಮ್ಮುಖದಲ್ಲಿ ನಬಿನ್, ನೂತನ ಅಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.
ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ನಬಿನ್ ಅವರ ಆಯ್ಕೆಯನ್ನ ಘೋಷಿಸಿ, ಪ್ರಮಾಣಪತ್ರ ನೀಡಿದರು.
ಈ ಮೊದಲು ನಬಿನ್ ಅವರನ್ನ ಪಕ್ಷದ ಕಾರ್ಯಾಧ್ಯಕ್ಷರಾಗಿ ನೇಮಿಸಲಾಗಿತ್ತು. ನೂತನ ಹುದ್ದೆಗೆ ಸ್ಪರ್ಧೆಗೂ ಮೊದಲು ಅವರು ಬಿಹಾರ ಸರ್ಕಾರದಲ್ಲಿ ಕಾನೂನು ಮತ್ತು ನ್ಯಾಯ, ವಸತಿ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

