ಬಿಜೆಪಿ ಶಾಸಕ ಬೈರತಿ ಬಸವರಾಜ್ ಅರೆಸ್ಟ್

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ ಅವರನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಭೈರತಿ ಬಸವರಾಜ್​ರನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಆಗಿ ಎಲ್ಲೋ ಇದ್ದರು.

ಆದರೆ ಗುರುವಾರ ಸಂಜೆ ಅವರು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಧಾವಿಸಿತು.

ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ ಸಂಜೆ 7 ಗಂಟೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸಿಐಡಿ ಅಧಿಕಾರಿಗಳು, ಬೈರತಿ ಬಸವರಾಜ್ ಅವರನ್ನು ಟರ್ಮಿನಲ್ ಒಳಗಡೆಯೇ ಬಂಧಿಸಿದ್ದಾರೆ.

ಪೊಲೀಸರು ಭೈರತಿ ಬಸವರಾಜ್​​ ಅವರನ್ನು ಏರ್​ಪೋರ್ಟ್​ನಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡ ನಂತರ ಶುಕ್ರವಾರ ಜಡ್ಜ್​​ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.

ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

ಕಳೆದ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಜಾಗೊಳಿಸಿತ್ತು.ನಂತರ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು,ಹಾಗಾಗಿ ಅವರನ್ನು ಬಂಧಿಸಲಾಗಿದೆ‌