ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ದಾಖಲೆಯ 17ನೇ ಬಜೆಟ್ ಮಂಡಿಸಿದ್ದು, ಒಟ್ಟು 4.48 ಲಕ್ಷ ಕೋಟಿ ರೂ ಆಯವ್ಯಯ ಮಂಡಿಸಿದ್ದಾರೆ.
ವಸತಿ ಯೋಜನೆಗಳಿಗೆ ಆದ್ಯತೆ-
ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದ್ದು, ಹಿಂದಿನ ಸರ್ಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.
ಆಹಾರ ಭದ್ರತೆಗೆ ಆದ್ಯತೆ-
ಆಹಾರ ಧಾನ್ಯಗಳ ವಿತರಣೆಗಾಗಿ ನೀಡಲಾಗುವ ಚಿಲ್ಲರೆ ಹಾಗೂ ಸಗಟು ಲಾಭಾಂಶದ ಪಾವತಿಯಲ್ಲಿ ವಿಳಂಬವನ್ನು ನಿವಾರಿಸಲು FIST Application ಮೂಲಕ ಲಾಭಾಂಶದ ನೇರ ಪಾವತಿ ಮಾಡಲು ಅವಕಾಶ ನೀಡಲಾಗಿದೆ.
ಪ್ರಸ್ತುತ ಜಾರಿಯಲ್ಲಿರುವ ಇಲಾಖೆಯ ಸಹಾಯವಾಣಿ (1967) ವ್ಯವಸ್ಥೆಯನ್ನು ಸ್ವಯಂ ಚಾಲಿತ ದೂರು ಕೇಂದ್ರ, ಧ್ವನಿ ಚಾಟ್‌ಬಾಟ್ ಮತ್ತು ಲೈವ್ ಕರೆ ವರ್ಗಾವಣೆ ವ್ಯವಸ್ಥೆಗಳನ್ನು ಒಳಗೊಂಡ AI ಆಧಾರಿತ ಸ್ಮಾರ್ಟ್ ಅನ್ನವಾಣಿ ಯಾಗಿ ಪರಿವರ್ತನೆ ಮಾಡಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಒತ್ತು-
ಈ ಬಾರಿಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಿಎಂ ಒತ್ತು ನೀಡಿದ್ದಾರೆ.
150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಆರಂಭ ಸಂತ ಶಿಶುನಾಳ ಶರೀಫರವರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು CBSE ಪಠ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುವುದು. 100 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿ ಶಾಲೆಗಳಾಗಿ ಉನ್ನತೀಕರಣ ಮಾಡಲು ನಿರ್ಧರಿಸಲಾ ಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಆದ್ಯತೆ-
ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಆದ್ಯತೆ ನೀಡಲಾಗಿದೆ.
ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಾಪನೆ
ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ 50 ಸ್ವಂತ ಕಟ್ಟಡಗಳ ನಿರ್ಮಾಣ ಸವಿತಾ ಸಮಾಜದವರು ಸಲೂನ್‌ಗಳನ್ನು ತೆರೆಯಲು ಶೇ.4 ರಷ್ಟು ಬಡ್ಡಿದರದಲ್ಲಿ ರೂ.10 ಲಕ್ಷದ ವರೆಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯ ಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ದುರಸ್ತಿ ಕಾಮಗಾರಿಗಳಿಗೆ ರೂ.50 ಕೋಟಿ ಅನುದಾನ
ಮೀಸಲಿಡಲಾಗಿದೆ ಎಂದು ಸಿಎಂ ಪ್ರಕಟಿಸಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಆಧ್ಯತೆ ನೀಡಿರುವ ಸಿದ್ದು,150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ಹೊಸ ವಿದ್ಯಾರ್ಥಿ ನಿಲಯಗಳ ಆರಂಭಕ್ಕೆ ಮುಂದಾಗಿದ್ದಾರೆ.
ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕೆ ಗ್ರೀನ್ ಸಿಗ್ನಲ್:
ಪರಿಶಿಷ್ಟ ಜಾತಿಯ 20, ಪರಿಶಿಷ್ಟ ಪಂಗಡದ 5 ಮತ್ತು ಹಿಂದುಳಿದ ವರ್ಗಗಳ 5 ವಸತಿ ಶಾಲೆಗಳು ಸೇರಿದಂತೆ ಒಟ್ಟು 30 ಕ್ರೈಸ್ ವಸತಿ ಶಾಲೆಗಳಿಗೆ ರೂ.660 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ
ಸಮಾಜ ಕಲ್ಯಾಣ ಇಲಾಖೆಯಡಿ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ ರೂ. 1,500 ಕೋಟಿ ಅನುದಾನ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಒತ್ತು-
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹೆಚ್ಚುವರಿ ಒಂದು ಜೊತೆ ಸಮವಸ್ತ್ರ ವಿತರಣೆ
ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ನೀಡಲಾಗುವ ಪ್ರೋತ್ಸಾಹಧನವನ್ನು 45,000ಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಆರೋಗ್ಯ ಕ್ಷೇತ್ರಕ್ಕೂ ಒತ್ತು-
ಈ ಬಾರಿಯ ಬಜೆಟ್‌ನಲ್ಲಿ ಸಿದ್ದರಾಮಯ್ಯ ಆರೋಗ್ಯ ಕ್ಷೇತ್ರಕ್ಕೂ ಒತ್ತು ನೀಡಿದ್ದು,
45 ಕೋಟಿ ಅನುದಾನದಡಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೆ ಏರಿಸುವುದಾಗಿ ತಿಳಿಸಿದ್ದಾರೆ.
ಟೈಪ್-1 ಮಧುಮೇಹದಿಂದ ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್‌ಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಪ್ರಾತಿನಿಧ್ಯ-
ಶಿಕ್ಷಣ ಕ್ಷೇತ್ರಕ್ಕೆ ಪ್ರಾತಿನಿಧ್ಯ ನೀಡಿರುವ ಸಿಎಮನ,2026-27 ಸಾಲಿನಲ್ಲಿ ಶಾಲಾ – ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಸಣ್ಣ ನೀರಾವರಿ ಕ್ಷೇತ್ರಕ್ಕೆ ಆದ್ಯತೆ-
ಈ ಬಾರಿಯ ಆಯವ್ಯಯದಲ್ಲಿ ಸಣ್ಣ ನೀರಾವರಿ ಕ್ಷೇತ್ರಕ್ಕೆ ಆದ್ಯತೆ ನೀಡಿರುವ ಮುಖ್ಯ ಮಂತ್ರಿಗಳು,650 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂಎಲ್‌ಡಿ ನೀರನ್ನು ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕಿನ 41 ಕೆರೆಗಳನ್ನು ತುಂಬಿಸುವ ಯೋಜನೆಯ ಅನುಷ್ಠಾನ ಮಾಡಲಾಗುವುದು
ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಕೆರೆಗಳ ಆಧುನೀಕರಣ, ಅಣೆಕಟ್ಟು, ಪಿಕ್-ಅಪ್ & ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ನೀರಾವರಿ ವಲಯದ ಅಭಿವೃದ್ಧಿಗೂ ಆದ್ಯತೆ ನೀಡಿ ರುವ ಸಿಎಂ, ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿ ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ರೂ.490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಅನುಷ್ಠಾನಕ್ಕೆ ಮುಂದಾಗಿದ್ದಾರೆ.
ಇದಲ್ಲದೆ ಕೃಷಿ,ಸಹಕಾರಿ ವಲಯ,ಹೈನುಗಾರಿಕೆ ತೋಟಗಾರಿಜೆಗೂ ಒತ್ತು ನೀಡಿದ್ದಾರೆ.
ವೈದ್ಯಕೀಯ ಶಿಕ್ಷಣಕ್ಕೆ ಮಹತ್ವ-
ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಅನುದಾನ ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನ ಮೀಸಲು ಇಟ್ಟಿರುವುದಾಗಿ ಸಿಎಂ ತಿಳಿಸಿದರು.

