ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ: ಸಿಎಂ ಟಾಂಗ್

ಬಾಗಲಕೋಟೆ: ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ, ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಸಿಎಂ ಮಾತನಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ,ಇನ್ ಒಂದೂವರೆ ತಿಂಗಳು ಮಾತ್ರ ಸಿದ್ದರಾಮಯ್ಯ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ, ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.

ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದು ಹೇಳಿದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲ,ಹಾಗಾಗಿ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ.
ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯ ಮಂತ್ರಿಗಳು ಟೀಕಿಸಿದರು.

ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ತೋರಿಸುತ್ತದೆ ಎಂದು ಹೇಳಿದರು.

ಲೋಕಸಭಾ ಸ್ಥಾನಗಳನ್ನು ಹೆಚ್ಚಿಸುವುದರಿಂದ ರಾಜ್ಯಕ್ಕೆ ಲಾಭವಿದೆಯೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಜನಸಂಖ್ಯೆಗೆ ಅನುಗುಣವಾಗಿ ಸ್ಥಾನಗಳನ್ನು ಹೆಚ್ಚಿಸಬೇಕು ಆದರೆ ಮಲತಾಯಿ ಧೋರಣೆ ಇರಬಾರದು. ದಕ್ಷಿಣದ ರಾಜ್ಯಗಳಿಗೆ ಕಡಿಮೆ, ಉತ್ತರದ ರಾಜ್ಯಗಳಿಗೆ ಹೆಚ್ಚಿನ ಸ್ಥಾನ ಕೊಡುವ ಕೆಲಸ ಮಾಡಬಾರದು ಎಂದು ತಿಳಿಸಿದರು.

ಗ್ಯಾಸ್ ಸಿಲಿಂಡರ್ ಅಭಾವದ ಬಗ್ಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆ ಅಷ್ಟೇನೆ ಎಂದು ಹೇಳಿದರು.

ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರಲ್ಲ ಎಂಬ ಇನ್ನೊಂದು ಪ್ರಶ್ನೆಗೆ, ಅವರೆಲ್ಲ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದು ತಿಳಿಸಿದರು.

ಉಪಚುನಾವಣೆ ಫಲಿತಾಂಶ ಸಿಎಂ ಸ್ಥಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ ಎರಡೂ ಕಡೆ ನಮ್ಮ ಪಕ್ಷ ಗೆಲ್ಲಲಿದ್ದು, ಪರಿಣಾಮ ಹೇಗೆ ಬೀರಲು ಸಾಧ್ಯ ಎಂದು ಸಿದ್ದರಾಮಯ್ಯ ಮರು‌‌ ಪ್ರಶ್ನೆ ಮಾಡಿದರು.