ಮೈಸೂರು: ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ: ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಧಿಕಾರಿಗಳು ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿದ್ದೀರಿ ಒಳ್ಳೆಯದು, ಈ ಗ್ರಾಮಗಳಿಗೆ ನಿಗದಿತವಾಗಿ ಭೇಟಿ ನೀಡಿ ಕುಡಿಯುವ ನೀರಿನ ಸ್ಥಿತಿ ಗತಿಗಳನ್ನು ತಿಳಿದುಕೊಂಡು ಅಗತ್ಯ ವ್ಯವಸ್ಥೆ ಮಾಡಿ ಎಂದು ಸೂಚಿಸಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿ, ಯಾವುದಾದರೂ ತೊಂದರೆ ಇದ್ದಲ್ಲಿ ಸರಿಪಡಿಸಿಕೊಳ್ಳಿ, ಖಾಸಗಿ ಬೋರ್ ವೆಲ್ ಗಳ ಪಟ್ಟಿ ಹಾಗೂ ಟ್ಯಾಂಕರಗಳ ಮೂಲಕ ನೀರು ಸರಬರಾಜು ಮಾಡಬೇಕಿರುವ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಯೋಜನೆ ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಅಥವಾ ಯಾವುದೇ ತೊಂದರೆ ಇದ್ದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಮೊದಲ ಆದ್ಯತೆ ನೀಡಿ ಪರಿಹರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

