ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದೆ, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ವಿಧಾನಸೌಧದ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯ ಮಂತ್ರಿಗಳು ಮಾತನಾಡಿದರು.
ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದೆ, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ಆಗಬಹುದು ಎಂದು ತಿಳಿಸಿದರು.
ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ ಎಂದು ಸಿಎಂ ಕಡಕ್ ಎಚ್ಚರಿಕೆ ನೀಡಿದರಲ್ಲದೆ ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ಕಂಡು ಬರುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಅಧಿಕಾತಿಗಳಿಗೆ ಸೂಚನೆಗಳನ್ನು ನೀಡಬೇಕು ಎಂದು ಸಿಎಂ ಸೂಚಿಸಿದರು.
ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2410 ಗ್ರಾಮ ಪಂಚಾಯತ್ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಟ್ಯಾಂಕರ್ಗಳ ಮೂಲಕ 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಗುರುತಿಸಿದರು.
ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು.
ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಇದಕ್ಕಾಗಿ ತಾಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆರ್ ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.
ಕಳೆದ ಎರಡು ವರ್ಷಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಮೇವಿನ ಕೊರತೆ ಸಧ್ಯಕ್ಕೆ ಇರುವುದಿಲ್ಲ. ಆದರೆ ಈ ಕುರಿತು ನಿರ್ಲಕ್ಷ್ಯ ವಹಿಸದೆ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದು ಹೇಳಿದರು.
ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಕುರಿತಾದ ಟಾಸ್ಕ್ ಪೋರ್ಸ್ ಸಭೆ ನಡೆಸಿ ವರದಿ ಸಲ್ಲಿಸಬೇಕು ಮುಖ್ಯಮಂತ್ರಿ ಅವರು ತಿಳಿಸಿದರು.
ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ಸಿದ್ದರಾಮಯ್ಯ ಆದೇಶಿಸಿದರು.

