ಬೆಂಗಳೂರು: ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ, ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರದ ಪರಮಾವಧಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಟ ಚೇತನ್ ಅಹಿಂಸಾ ಅವರಿಗೆ ಖಡಕ್ ತಿರುಗೇಟು ನೀಡಿದ್ದಾರೆ.
ಹೆಸರಿನಲ್ಲಿ ಅಹಿಂಸೆ ಇರಬಹುದು, ಆದರೆ ನಿಮ್ಮ ಪ್ರತಿಯೊಂದು ಮಾತೂ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ ಎಂದು ಟೀಕಿಸಿದ್ದಾರೆ.
ಡಾ. ರಾಜ್‌ಕುಮಾರ್ ಕುರಿತು ಚೇತನ್ ಮಾಡಿದ್ದ ಪೋಸ್ಟ್‌ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ನಿಖಿಲ್,ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ವ್ಯಕ್ತಿತ್ವದ ಬಗ್ಗೆ ಟೀಕಿಸುವ ಮೊದಲು ಇತಿಹಾಸ ತಿಳಿದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಹಜವಾದರೂ ಅವುಗಳಿಗೆ ಒಂದು ಘನತೆ ಇರಬೇಕು,ನಮ್ಮ ಕುಟುಂಬದ ಮೇಲಿನ ವೈಯಕ್ತಿಕ ದಾಳಿ ಅಥವಾ ಸೋಲು-ಗೆಲುವಿನ ಮಾತುಗಳನ್ನು ನಾವು ಸದಾ ವಿನಮ್ರತೆಯಿಂದಲೇ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ ನಿಖಿಲ್.
ಪ್ರಜಾಪ್ರಭುತ್ವದಲ್ಲಿ ಅಂತಿಮ ತೀರ್ಪುಗಾರರು ಜನರೇ ಹೊರತು, ಸಮಾಜದಲ್ಲಿ ದ್ವೇಷ ಬಿತ್ತುವ ವ್ಯಕ್ತಿಗಳಲ್ಲ. ಸಂಸ್ಕಾರ ಮನೆಯಿಂದ ಬರಬೇಕು, ಟೀಕೆಗಳು ಜನರ ಪ್ರೀತಿಯ ಅಡಿಪಾಯದ ಮೇಲಿರಬೇಕು. ಕೇವಲ ಪ್ರಚಾರದ ಹಪಾಹಪಿಯಿಂದಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

