ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನರ ಸಾವಿಗೆ ಕಾರಣವಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರನ್ನು ತಕ್ಷಣ ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಕರೆದು ಸಿದ್ದರಾಮಯ್ಯ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಖಾರವಾಗಿ ಪ್ರಶ್ನಿಸಿದರು.
ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದನ್ನ ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಮುಖ್ಯಮಂತ್ರಿಗಳು
ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದರು.
ನಿನ್ನೆ ಬೆಂಗಳೂರಿನಲ್ಲಿ ಸುರಿದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದೆ, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ, ಏಳು ಜನ ಸಾವನ್ನಪ್ಪಿದ್ದಾರೆ, ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸಿಎಂ ಸೂಚಿಸಿದರು.
ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಸಿಎಂ ಆದೇಶಿಸಿದರು.
ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯಬೇಕು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು, ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಿಸಿ ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಸಿದ್ದರಾಮಯ್ಯ ತಾಕೀತು ಮಾಡಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್ , ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

