ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಸಚಿವ ಸುಧಾಕರ್ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಸುಧಾಕರ್ ಅವರು ಮೂಲತಃ ಚಳ್ಳಕೆರೆಯವರು,2008ರಿಂದ ಹಿರಿಯೂರು ಶಾಸಕರಾಗಿದ್ದರು. ಎರಡನೇ ಬಾರಿಗೆ ಮಂತ್ರಿಯಾಗಿದ್ದ ಅವರು ಅತ್ಯಂತ ಜನಪ್ರಿಯ ವ್ಯಕ್ತಿ. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿಯೂ ಸಾಕಷ್ಟು ಕೊಡುಗೆ ನೀಡಿರುವ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ ಎಂದು ಸ್ಮರಿಸಿದರು.
ಸುಧಾಕರ್ ಅವರ ಚಿಕ್ಕಪ್ಪ ಜಯಣ್ಣ ಕೂಡಾ ಶಾಸಕರಾಗಿದ್ದವರು. ರಾಜಕೀಯ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದರು. ಚಳ್ಳಕೆರೆ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಹಿರಿಯೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು,ರೈತರ ಹಾಗೂ ಬಡವರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದು, ಜನಪ್ರಿಯ ವ್ಯಕ್ತಿಯಾಗಿದ್ದರು ಎಂದು ಬಣ್ಣಿಸಿದರು.
ಸುಧಾಕರ್ ಅವರು ಪತ್ನಿ, ಪುತ್ರಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂಧು-ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಿದ್ದ ರಾಮಯ್ಯ ಪ್ರಾರ್ಥಿಸಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ ಚಿತ್ರದುರ್ಗದಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಸಿಎಂ ಹೇಳಿದರು.
ಎಲ್ಲಾ ಸರ್ಕಾರಿ ಗೌರವದೊಂದಿಗೆ ಸುಧಾಕರ್ ಅವರ ಅಂತ್ಯಕ್ರಿಯೆ ನಡೆಯಲಿದೆ,
ನಾಳೆ ಚಳ್ಳಕೆರೆಯಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

