ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ತಾತ್ಕಾಲಿಕ: ಬಿ.ವೈ ವಿಜಯೇಂದ್ರ

ಶಿವಮೊಗ್ಗ: ಸಿದ್ದರಾಮಯ್ಯ ಅವರನ್ನ ಬಿಟ್ಟು ಯಾರೇ ಮುಖ್ಯಮಂತ್ರಿ ಆದರೂ ಅದು ತಾತ್ಕಾಲಿಕ, ರಾಜ್ಯದಲ್ಲಿ ಅವಧಿ ಪೂರ್ಣ ಚುನಾವಣೆ ಎದುರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸಲು ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೊನೆಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳನ್ನು ಬದಲಾಯಿಸಲು ಮುಂದಾಗಿದೆ. ಇದು ಇಡೀ ದೇಶದಲ್ಲಿ ಕಾಂಗ್ರೆಸ್ ಅವನತಿಗೆ ಮುನ್ಸೂಚನೆಯಾಗಿದೆ ಎಂದು ಹೇಳಿದರು.

ನಿನ್ನೆ ದೆಹಲಿಯಲ್ಲಿ 5 ಗಂಟೆಗಳ ಕಾಲ ಮ್ಯಾರಾಥಾನ್ ಸಭೆ ನಡೆದಿದೆ. ಸಭೆಯ ಕೊನೆಗೆ ಮುಖ್ಯಮಂತ್ರಿ ರಾಜಿನಾಮೆಗೆ ನಿರ್ಧಾರವಾಗಿದೆ,ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ಯಾರೇ ಮುಖ್ಯಮಂತ್ರಿಯಾದರೂ ಅದರ ಆಯ್ಕೆ ಅಷ್ಟು ಸಲೀಸಾಗಿ ಆಗುವುದಿಲ್ಲ. ರಾಜ್ಯ ಸರ್ಕಾರದಲ್ಲಿ ಗೊಂದಲ ಶುರುವಾಗಲಿದೆ. ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಮುಖ್ಯವಲ್ಲ. ಕೊನೆಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯ ಸರ್ಕಾರದ ವೈಫಲ್ಯ ಒಪ್ಪಿಕೊಂಡಿದೆ ಎಂದು ಟಾಂಗ್ ನೀಡಿದರು.

ದೇಶದಲ್ಲಿ ಕಾಂಗ್ರೆಸ್ ಅವನತಿ ಶುರುವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆದ ನಂತರ ಕರ್ನಾಟಕದಲ್ಲೂ ಕೂಡ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ,ಸಿದ್ದರಾಮಯ್ಯ ಬದಲು ಯಾರು ಸಿಎಂ ಆಗುತ್ತಾರೆ ಎನ್ನುವುದು ಮುಖ್ಯವಲ್ಲ. ಸಿದ್ದರಾಮಯ್ಯ ಅತಿಹೆಚ್ಚು ಅನುಭವವಿರುವ ಮುಖ್ಯಮಂತ್ರಿ. ಆದರೂ ಸಿದ್ದರಾಮಯ್ಯ ಅವಧಿಯಲ್ಲಿ ಹತ್ತು ಲಕ್ಷ ಕೋಟಿ ರೂ. ಸಾಲವಾಗಿದೆ. ಆಂತರಿಕ ಕಚ್ಚಾಟದಿಂದ ಆಡಳಿತ ಸಂಪೂರ್ಣ ಕುಸಿದು ಹೋಗಿದೆ ಎಂದು ಟೀಕಿಸಿದರು.

ವಾಲ್ಮೀಕಿ ನಿಗಮ,ಮುಡಾ ಹೀಗೆ ಹಲವು ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ, ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ಏಕೈಕ ರಾಜ್ಯ ಕರ್ನಾಟಕ, ಒಟ್ಟಾರೆ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದ ರಾಜ್ಯ ಸರ್ಕಾರವನ್ನು ಬದಲಾಯಿಸಲು ಕಾಂಗ್ರೆಸ್ ಹೈಕಮಾಂಡ್ ಹೊರಟಿದೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.