ಚಾಮರಾಜನಗರ: ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಶನಿವಾರ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಚಾಮರಾಜನಗರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯದ ಆವರಣವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಕಳೆದ ಎರಡು-ಮೂರು ದಿನಗಳ ಅಂತರದಲ್ಲೇ ಇದೇ ರೀತಿಯ ಮತ್ತೊಂದು ಬೆದರಿಕೆ ಇ-ಮೇಲ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಇದು ಹುಸಿ ಬೆದರಿಕೆಯೇ ಅಥವಾ ನಿಜವಾದ ಬೆದರಿಕೆಯೇ ಎಂಬ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬೆದರಿಕೆ ಇ-ಮೇಲ್ ಕಳುಹಿಸಿದ ಕಿಡಿಗೇಡಿಗಳನ್ನು ಪತ್ತೆಹಚ್ಚುವ ಕಾರ್ಯವೂ ಮುಂದುವರಿದಿದೆ.
ತಪಾಸಣೆ ನಡೆಯುತ್ತಿದ್ದ ವೇಳೆ ನ್ಯಾಯಾಲಯದಲ್ಲಿದ್ದ ವಕೀಲರು ಹಾಗೂ ಸಾರ್ವಜನಿಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಹೊರಗೆ ಕಳುಹಿಸಲಾಗಿತ್ತು, ಕೆಲಕಾಲ ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

