(ವರದಿ:ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ: ಮಲೆ ಮಹದೇಶ್ವರ ಬೆಟ್ಟದಿಂದ ಹಿಂಜರುಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದು ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಮೃತಪಟ್ಟಿದ್ದು, 45 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಮಧುವನ ಹಳ್ಳಿ ಸಮೀಪ ಇಂದು ಸಂಜೆ ಜರುಗಿದೆ.
ಚಾಮರಾಜನಗರ ತಾಲ್ಲೂಕಿನ ಕುದೇರು ಗ್ರಾಮದ ಮಹೇಶ್ (62) ಹಾಗೂ ಕೊಳ್ಳೇಗಾಲ ಪಟ್ಟಣದ ಭೀಮ ನಗರದ ನಿವಾಸಿ ಅಂಗನವಾಡಿ ಕಾರ್ಯಕರ್ತೆ ಪುಟ್ಟ ನಂಜಮ್ಮ(60) ಮೃತ ದುರ್ದೈವಿಗಳು.
ಮಲೆ ಮಹದೇಶ್ವರ ಬೆಟ್ಟದಿಂದ ಪ್ರಯಾಣಿಕರನ್ನು ತುಂಬಿಕೊಂಡು ಬರುತ್ತಿದ್ದ ಕೊಳ್ಳೇಗಾಲ ಘಟಕಕ್ಕೆ ಸೇರಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ (ಕೆಎ 57 ಎಫ್ 3964)ನ ಮುಂಬದಿಯ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿ ಎಡಬದಿಗೆ ಉರುಳಿ ಬಿದ್ದಿದೆ.
ಕೂಡಲೇ ಗಾಯಾಳುಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು. ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಗಂಭೀರವಾಗಿ ಗಾಯಗೊಂಡಿರುವ 22 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್, ಡಿ ವೈ ಎಸ್ ಪಿ ಮೋಹನ್, ವೃತ್ತನಿರೀಕ್ಷಕ ರವೀಂದ್ರ, ಗ್ರಾಮಾಂತರ ಠಾಣೆ ಪಿಎಸ್ಐ ಸುಪ್ರೀತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಉಪವಿಭಾಗ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಯೋಗಕ್ಷಮ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದರು.

