ಗದ್ದಲದ ನಡುವೆ ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಮಂಡನೆ

ನವದೆಹಲಿ: ವಿಪಕ್ಷಗಳ ಗದ್ದಲ ಕೋಲಾಹಲದ ನಡುವೆ ಲೋಕಸಭೆಯಲ್ಲಿ ಸೋಮವಾರ ಪ್ರಶ್ನೆ ಪತ್ರಿಕೆ ಸೋರಿಕೆ,ಪರೀಕ್ಷಾ ಅಕ್ರಮ ತಡೆ ಮಸೂದೆ ಮಂಡನೆ ಮಾಡಲಾಗಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ-2026 ಅನ್ನು ಮಂಡಿಸಿದರು.

ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವ ವ್ಯಕ್ತಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದ್ದು, 5 ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಲಕ್ಷದವರೆಗೆ ದಂಡ ವಿಧಿಸಲು ಪ್ರಸ್ತಾಪಿಸಲಾಗಿದೆ.

ಪರೀಕ್ಷಾ ಮಾಫಿಯಾ ಅಥವಾ ಸಂಘಟಿತ ಜಾಲಗಳು ಅಕ್ರಮ ಎಸಗಿದರೆ 1 ಕೋಟಿಯವರೆಗೆ ದಂಡ ಮತ್ತು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಠಿಣ ಕ್ರಮಗಳನ್ನು ತಿದ್ದುಪಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಲಾಗಿದ್ದು, ಚಾರ್ಜ್‌ಶೀಟ್ ಸಲ್ಲಿಕೆಯಾದ 3 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಲಾಗುವುದು.

ಈ ವೇಳೆ ಲೋಕಸಭೆಯ ಪ್ರತಿಪಕ್ಷ ಸದಸ್ಯರು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಲು ಮುಂದಾದರು, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಚ್‌ ಹೊಣೆಗಾರಿಕೆಗೆ ಆಗ್ರಹಿಸಿದರು ಘೋಷಣೆ ಕೂಗಿದರು. ಸದನದಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳನ್ನ ಕೆಲ ಕಾಲ ಮುಂದೂಡಲಾಗಿತ್ತು.