ಸರ್ಕಾರ ಯಾವ ಜನಪರ ಯೋಜನೆಗಳನ್ನೂ ನಿಲ್ಲಿಸದೆ ಕಾರ್ಯನಿರ್ವಹಿಸುತ್ತಿದೆ:ಯತೀಂದ್ರ

ನಂಜನಗೂಡು: ಬೆಲೆ ಏರಿಕೆಯ ಸವಾಲುಗಳ ನಡುವೆಯೂ ಕಾಂಗ್ರೆಸ್ ಸರ್ಕಾರವು ಚುನಾವಣೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ ಈಗಾಗಲೇ 158 ಭರವಸೆಗಳನ್ನು ಈಡೇರಿಸಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮೈಸೂರು ಇವರ ಸಹಯೋಗದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ
ಅವರು,ಯಾವುದೇ ಜನಪರ ಯೋಜನೆಗಳನ್ನು ನಿಲ್ಲಿಸದೆ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ವರುಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ಒಟ್ಟು 183.78 ಕೋಟಿ ವೆಚ್ಚದ 161 ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಇದರಲ್ಲಿ 143.38 ಕೋಟಿ ಅಂದಾಜು ಮೊತ್ತದ 134 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ 40.40 ಕೋಟಿ ವೆಚ್ಚದ 27 ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಜನರ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಇದು ಅವರ ಜನಪರ ಕಾಳಜಿ ಹಾಗೂ ವರುಣ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ರಸ್ತೆ, ಶಿಕ್ಷಣ, ವಸತಿ, ನೀರಾವರಿ, ಕುಡಿಯುವ ನೀರು ಹಾಗೂ ಮೂಲಸೌಕರ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸಮಗ್ರ ಅಭಿವೃದ್ಧಿ ಸಾಧಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಸಚಿವರು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರಿಗೆ ನೆರವು ನೀಡಲಾಗುತ್ತಿದೆ. ಸಾರ್ವಜನಿಕ ಸೇವೆಗಳು ಸುಲಭವಾಗಿ ಹಾಗೂ ತ್ವರಿತವಾಗಿ ದೊರೆಯುವಂತೆ ‘ಸೇವಾ ಒನ್’ ಪೋರ್ಟಲ್ ಜಾರಿಗೊಳಿಸಲಾಗಿದೆ ಅಭಿವೃದ್ಧಿ ಕಾರ್ಯಗಳನ್ನು ಸಚಿವರು ವಿವರಿಸಿದರು.

ನಡುವೆಯೂ ಜನಪರ ಯೋಜನೆಗಳನ್ನು ಮುಂದುವರಿಸಿಕೊಂಡು, ಅಭಿವೃದ್ಧಿ ಹಾಗೂ ಸಾಮಾಜಿಕ ಕಲ್ಯಾಣವನ್ನು ಸಮಾನವಾಗಿ ಮುನ್ನಡೆಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಡಾ.ಯತೀಂದ್ರ ಹೇಳಿದರು.

ಇದೇ ಸಂದರ್ಭದಲ್ಲಿ ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿ, ಶುಭ ಹಾರೈಸಲಾಯಿತು.

ಸಮಾರಂಭದಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಶಿವಕುಮಾರ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬೀರಿಹುಂಡಿ ಬಸವಣ್ಣ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.