ಕ್ಷಮೆ ಕೇಳುವ ಪ್ರಮೇಯವೇ ಇಲ್ಲ: ಸಚಿವ ಡಾ.ಯತೀಂದ್ರ

ಮೈಸೂರು: ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಅರಮನೆ ಸರ್ಕಾರದ ಆಸ್ತಿ. ಈ ಕುರಿತು ನಾನು ವಿಚಾರವನ್ನು ಸ್ಪಷ್ಟಪಡಿಸಿದ್ದೇನೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಈ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು.

ರಾಜಮನೆತನದವರ ಜೊತೆ ಮುಖ್ಯಮಂತ್ರಿಗಳೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ನಾನು ಹೋಗಿ ಮಾತನಾಡುವ ಅಗತ್ಯವಿಲ್ಲ. ಅಂಬಾರಿ, ಅರಮನೆ ವಿಚಾರದಲ್ಲಿ ನಾನು ತಪ್ಪಾಗಿ ಮಾತನಾಡಿಲ್ಲ. ಅರಮನೆ ಸ್ವಾಧೀನ ಕಾಯ್ದೆ ಪ್ರಕಾರವೇ ನಾನು ಮಾತನಾಡಿದ್ದೇನೆ. ಈ ವಿಚಾರವನ್ನು ತಪ್ಪಾಗಿ ಅರ್ಥೈಸಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಯತೀಂದ್ರ‌ ಬೇಸರ ವ್ಯಕ್ತಪಡಿಸಿದರು.

ನಾನು ಪ್ರಜ್ಞಾಪೂರ್ವಕವಾಗಿ ಮಾತನಾಡಿದ್ದೇನೆ. ತಪ್ಪಾಗಿದ್ದರೆ ಕ್ಷಮೆ ಕೇಳಬಹುದಿತ್ತು. ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಕ್ಷಮೆ ಕೇಳುವುದಿಲ್ಲ ಎಂದು ತಿಳಿಸಿದರು.

ಸರ್ಕಾರಿ ಕಾರ್ಯಕ್ರಮ ಏಳು ದಿನ ಮಾಡಿ, ಅಂಬಾರಿ ಕೊಡುವುದಿಲ್ಲ ಎಂದು ಪತ್ರ ಬರೆದಿದ್ದರು. ಆ ಪತ್ರಕ್ಕೆ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಅಂಬಾರಿ ಇಲ್ಲದೇ ಜಂಬೂಸವಾರಿ ಮಾಡಲಾಗುವುದಿಲ್ಲ. ಇದು ಪ್ರಜಾಪ್ರಭುತ್ವ, ಈಗ ಇರುವುದು ಜನರ ಸರ್ಕಾರ. ಜನರಿಗಾಗಿ ನಾವು ದಸರಾ ಮಾಡುತ್ತೇವೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಪುನರುಚ್ಛರಿಸಿದರು.