ಇಲಾಖೆಗಳ ನಡುವೆ ಸಮನ್ವಯ ತಂದು ರೈತರ ಅಭಿವೃದ್ಧಿ -ಸಚಿವ ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ: ರಾಜ್ಯದ ಎಲ್ಲ ಇಲಾಖೆಗಳ ನಡುವೆ ಸಮನ್ವಯ ತಂದು ರೈತರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಪ್ರಯೋಗ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಅವರು, ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ತಂಡ ರಚಿಸಿ, ಎಲ್ಲ ಇಲಾಖೆಗಳ ಸಮನ್ವಯವನ್ನು ಮಾಡಿ, ರೈತರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಸಂಬಂಧಿಸಿದ ಎಲ್ಲ ಯೋಜನೆಗಳನ್ನು ಸಮನ್ವಯದಿಂದ ಸೂಕ್ತವಾಗಿ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.
ಸಹಕಾರ ಎಂದರೆ ಆರ್ಥಿಕ ಸಮೃದ್ಧಿ. ಕುಟುಂಬ ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿಯಾಗುತ್ತದೆ. ರಾಜ್ಯದ ಬಹುಪಾಲು ಜನರು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿ ವ್ಯಕ್ತಿ ಸಹಕಾರದಿಂದ ಮುಂದೆ ಬಾರಲು ಸಾಧ್ಯ ಎಂಬುದನ್ನು ತೋರಿಸಿಕೊಡಬೇಕಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು 20 ಲಕ್ಷ ಕೋಟಿ ರೂ. ಆರ್ಥಿಕ ಪರಿಹಾರ ಪ್ಯಾಕೇಜ್ ನೀಡಿದ್ದಾರೆ. ಯಾವ ದೇಶವೂ ಇಷ್ಟು ಮೊತ್ತದ ಪರಿಹಾರವನ್ನು ನೀಡಿಲ್ಲ. ರಾಜ್ಯದಲ್ಲಿ ಕಳೆದ ವರ್ಷ ರೈತರಿಗೆ 13 ಸಾವಿರ ಕೋಟಿ ರೂ. ಸಾಲ ನೀಡಲಾಗಿತ್ತು. ಈ ಬಾರಿ 15 ಸಾವಿರ ಕೋಟಿ ರೂ. ಸಾಲ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಕೊರೊನಾ ಬಂದರೂ ಸಾಲದ ಗುರಿಯನ್ನು ಇನ್ನೂ ಹೆಚ್ಚಿಸಲಾಗಿದೆ. ಇದು ರಾಜ್ಯ ಸರ್ಕಾರದ ಬದ್ಧತೆಗೆ ಹಿಡಿದ ಕೈಗನ್ನಡಿ ಎಂದರು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಕ್ಷೇತ್ರದ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.