ಡಿಸೆಂಬರ್ ಕೊನೆವರೆಗೆ ಶಾಲೆ ಇಲ್ಲ -ಸಿಎಂ ಬಿಎಸ್ ವೈ

ಬೆಂಗಳೂರು: ಡಿಸೆಂಬರ್ ಕೊನೆ ವರೆಗೆ ಶಾಲೆ ಆರಂಭ ಇಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು. ಡಿಸೆಂಬರ್ ಕೊನೆಯಲ್ಲಿ ಸಭೆ ನಡೆಸ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಯಡಿಯೂರಪ್ಪನವರು ತಿಳಿಸಿದರು.
ಶಾಲಾ-ಕಾಲೇಜು ಪ್ರಾರಂಭ ಕುರಿತು ಸೋಮವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಯಿತು. ನಂತರ ಸಿಎಂ ಈ ಕುರಿತು ಮಾಧ್ಯಮ ಪ್ರತಿನಿಧಗಳಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ತಜ್ಞರ ಅಭಿಪ್ರಾಯಗಳನ್ನು ಪಡೆಯಲಾಗಿದ್ದು, ಸದ್ಯಕ್ಕೆ ಶಾಲೆ ಪ್ರಾರಂಭ ಬೇಡ ಎಂದು ನಿರ್ಧರಿಸಲಾಯಿತು. ಹಾಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಪ್ರಾರಂಭ ಮಾಡಲಾಗುವುದಿಲ್ಲ ಎಂದು ಸಿಎಂ ಹೇಳಿದರು.
ಹೈದರಾಬಾದ್ ನಲ್ಲಿರುವ ಆರೋಗ್ಯ ಸಚಿವ ಡಾ.ಸುಧಾಕರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡು, ಡಿಸೆಂಬರ್ ಮುಕ್ತಾಯದವರೆಗೂ ಶಾಲೆ ಬೇಡ ಎಂದು ಸಭೆಗೆ ತಮ್ಮ ಅಭಿಪ್ರಾಯ ತಿಳಿಸಿದರು. ಡಿಸೆಂಬರ್ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಇದು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಆಗುತ್ತಿದೆ. ಈಗಾಗಲೇ ಚಳಿಗಾಲ ಶುರುವಾಗ್ತಿದೆ. ತಜ್ಞರು ಕೂಡ ಡಿಸೆಂಬರ್ ವರೆಗೆ ಶಾಲೆ ಬೇಡ ಅಂದಿದ್ದಾರೆ. ಹೀಗಾಗಿ ಡಿಸೆಂಬರ್ ಕೊನೆಯವರೆಗೂ ಶಾಲಾ ಕಾಲೇಜು ಆರಂಭ ಮಾಡುವುದು ಸೂಕ್ತವಲ್ಲ ಎಂದು ಸುಧಾಕರ್ ತಿಳಿಸಿದರು.
ಸಭೆ ಪ್ರಾರಂಭದಲ್ಲಿ ಡಿಗ್ರಿ ಕಾಲೇಜುಗಳ ಬಗ್ಗೆ ಚರ್ಚೆ ನಡೆಸಲಾಯಿತು. ಎಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬರ್ತಿದ್ದಾರೆ. ಟೆಸ್ಟ್ ಮಾಡಿಸಿದಾಗ ಎಷ್ಟು ವಿದ್ಯಾರ್ಥಿಗಳಿಗೆ ಸೋಂಕು ಬಂದಿದೆ ಅನ್ನೋದನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಿಎಸ್ ವಿಜಯ್ ಭಾಸ್ಕರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.